ಗದಗ: ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು, ಸದ್ಯ ಮಳೆ ಕಡಿಮೆಯಾಗಿದ್ದರಿಂದ ಹದಗೆಟ್ಟಿರುವ ಎಲ್ಲ ರಸ್ತೆಗಳ ಸುಧಾರಣೆಗೆ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಸಂಬಂಧಿ ಸಿದ ಅಧಿ ಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿವೆ. ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ರಸ್ತೆ ಸುಧಾರಣೆಗೆ ಸಂಬಂಧಿ ಸಿದಂತೆ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದರು.
ಈಗಾಗಲೇ ಹಲವಾರು ಬಾರಿ ಸಭೆಗಳಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕುರಿತು ನಿರ್ದೇಶನಗಳನ್ನು ನೀಡಲಾಗಿದ್ದು, ಕೆಲವು ಅತೀ ಜನಸಂದಣಿ ಹಾಗೂ ವಾಹನ ಸಂಚಾರ ಇರುವ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿ, ಸಾರ್ವಜನಿಕ ಓಡಾಟಕ್ಕೆ ಕ್ರಮ ವಹಿಸಲಾಗಿದೆ. ಅತಿಯಾದ ಮಳೆಯಿಂದಾಗಿ ರಸ್ತೆಗಳ ದುರಸ್ತಿಗೆ ಅವಕಾಶಇಲ್ಲದಂತಾಗಿತ್ತು. ಆದರೆ, ಕಳೆದ ಒಂದು ವಾರದಿಂದ ಮಳೆ ಪೂರ್ಣ ಪ್ರಮಾಣದಲ್ಲಿ ನಿಂತಿದೆ. ಕೂಡಲೇ ಲೋಕೋಪಯೋಗಿ ಇಲಾಖೆ ತಮ್ಮ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗಳನ್ನು 15 ದಿನಗಳಲ್ಲಿ ಪೂರ್ಣಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದರು.
ಅದೇ ರೀತಿ,ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ವಾಹನ ಸಂಚಾರದ ರಸ್ತೆಗಳನ್ನು ಗುರುತಿಸಿ ಮೊದಲ ಹಂತದಲ್ಲಿ ಕೂಡಲೇ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೊಳ್ಳಬೇಕು. ಇತರೇ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚಿ ದುರಸ್ತಿಗೊಳಿಸಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ಕೆ.ಯು. ಡಬ್ಲೂ.ಎಸ್. ವತಿಯಿಂದ ಒಳಚರಂಡಿ ಹಾಗೂ ಕೆ.ಯು.ಐ.ಡಿ.ಎಫ್.ಸಿ. ವತಿ ಯಿಂದ 24×7 ನೀರು ಸರಬರಾಜು ಅಭಿವೃದ್ಧಿ ಕಾಮಗಾರಿಗಳಿಂದ ಹಾಳಾದ ರಸ್ತೆಗಳನ್ನು ಪ್ರಥಮ ಆದ್ಯತೆ ಮೇರೆಗೆ ದುರಸ್ತಿಗೊಳಿಸಬೇಕು. ಅದೇ ರೀತಿ, ಗದಗ ಜಿಲ್ಲೆಗೆ ಸಂಬಂಧಿಸಿದ ನಗರದ ಹೊರವಲಯದಲ್ಲಿರುವ ಸಂಪರ್ಕ ರಸ್ತೆಗಳು ನಿರ್ವಹಣೆಯನ್ನು ರಾಜ್ಯ ಹೆದ್ದಾರಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ, ಕೆಶೀಪ್ ಹಾಗೂ ಲೋಕೋಪಯೋಗಿ ಇಲಾಖೆಗಳು ಹಾಳಾದ ರಸ್ತೆಗಳಲ್ಲಿ ಕೂಡಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್., ಲೋಕೋಪಯೋಗಿ ಇಲಾಖೆ, ಕೆ.ಯು. ಡಬ್ಲೂ.ಎಸ್. ಮತ್ತು ಕೆ.ಯು.ಐ.ಡಿ.ಎಫ್.ಸಿ., ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು,ನಗರಸಭೆ ಅಭಿಯಂತರರಿದ್ದರು.