ರಾಮನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಸ್ಯೆಗಳ ಪರಿಹಾರಕ್ಕೆ ಸಮರ್ಪಕ ಕ್ರಮ ಕೈಗೊಂಡು ಸಂಬಂಧಿಸಿದ ಇಲಾಖೆಗಳ ವತಿಯಿಂದ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದರೊಂದಿಗೆ ಸಮಸ್ಯೆಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ದೌರ್ಜನ್ಯ ಪ್ರತಿಬಂಧ ತಿದ್ದುಪಡಿ ಅಧಿನಿಯಮ 2015ರ ಅನುಷ್ಟಾನ ಸಂಬಂಧ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಸ್ಮಶಾನಕ್ಕೆ ಜಾಗ ನೀಡುವ ಪ್ರಕ್ರಿಯೆ ನಡೆದಿದೆ. ಜಮೀನು ಲಭ್ಯವಿರುವ ಕಡೆಗಳಲ್ಲಿ ನೀಡುವುದು ಮತ್ತು ಇಲ್ಲದಿರುವ ಕಡೆಗಳಲ್ಲಿ ಖರೀದಿ ಮಾಡಲಾಗುವುದು. ಈಗಾಗಲೇ ಲಭ್ಯವಿರುವ ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುವುದು. ಜಮೀನು ಸಕ್ರಮಕ್ಕೆ ಸರ್ಕಾರದ ಹಂತದಲ್ಲಿ ನಿರ್ಧಾರ ಮಾಡಿದಾಗ ಮಾತ್ರ, ಸ್ಥಳೀಯವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಅವಕಾಶ ಬರುವವರೆಗೂ ಕಾಯಬೇಕು ಎಂದು ಭರವಸೆ ನೀಡಿದರು.
ಅರ್ಹರಿಗೆ ನಿವೇಶನ ನೀಡಿ: ನಗರಸಭಾ ವ್ಯಾಪ್ತಿಯಲ್ಲಿ ಬರುವಂತಹ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ವರ್ಗದವರಿಗೆ ನಿವೇಶನ ಮತ್ತು ಮನೆ ಇಲ್ಲದವರಿಗೆ ಸರ್ಕಾರಿ ಜಾಗವನ್ನು ಗುರುತಿಸಿ, ಕಾನೂನು ರೀತಿಯಲ್ಲಿ ನಿವೇಶನ ನೀಡಬೇಕು ಎಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಅಂಗಡಿ ಮಳಿಗೆಗಳ ವಿರುದ್ಧ ಕ್ರಮ ಕೈಗೊಂಡು, ಅಂಗಡಿಗಳನ್ನು ತೆರವುಗೊಳಿಸಬೇಕು. ಮಾಗಡಿ ತಾಲೂಕಿನಲ್ಲಿ ವಾಸಿಸುತ್ತಿರುವ ಇರುಳಿಗರು, ಬೆಟ್ಟಗಳ ಮೇಲೆ ನೆಲೆಸಿರುವ ಇರುಳಿಗರ ಬುಡಕಟ್ಟು ಜನಾಂಗಕ್ಕೆ ನಿವೇಶನ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸಂಪರ್ಕ ಮುಂತಾದ ಮೂಲಭೂತ ಸೌಲಭ್ಯ ಮತ್ತು ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿ: ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಸಂತೋಷ್ ಬಾಬು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಅಲಿಸಿ, ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತವಾಗಿ ಎಫ್‌ಐಆರ್ ದಾಖಲಿಸಿ, ವರದಿ ಸಲ್ಲಿಸಲು ಠಾಣಾಧಿಕಾರಿಗಳು ಕ್ರಮವಹಿಸಬೇಕು. ಜೊತೆಗೆ ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಈ ಕುರಿತಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ: ಜಿಲ್ಲೆಯಾದ್ಯಂತ ದಲಿತ ಕಾಲೋನಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಒಂದು ವೇಳೆ ಮದ್ಯ ಮಾರಾಟ ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಕಿರಣ್ ಎಂಬ ಯುವಕನ ಮೇಲೆ ಹಲ್ಲೆಯಾಗಿರುವುದನ್ನು ಖಂಡಿಸಿ, ಸಭೆಯಲ್ಲಿ ಅಸಮಾಧಾನ ವ್ಯಕ್ತ ಪಡಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ದಿಗ್ವಿಜಯ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಮಂಜುನಾಥ್ ಮತ್ತು ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲೆ ದೌರ್ಜನ್ಯ ತಡೆಗೆ ಜಿಲ್ಲಾಡಳಿತ ಸಿದ್ಧವಿದೆ. ಅಂತಹ ಯಾವುದೇ ಘಟನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಎಫ್‌ಐಆರ್ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
– ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾಧಿಕಾರಿ, ರಾಮನಗರ