Advertisement

ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳಿ

12:57 AM Mar 05, 2020 | mahesh |

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ನಿಯಂತ್ರಣ ಕುರಿತಂತೆ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳು ವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚನೆ ನೀಡಿದ್ದಾರೆ.

Advertisement

ಜಿಲ್ಲೆಯಲ್ಲಿ ಕೊರೊನಾ ವೈರಸ್‌ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊರೊನಾ ವೈರಸ್‌ ಶಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಎನ್‌ 95 ಮಾಸ್ಕ್ ಸೇರಿದಂತೆ ಸುರಕ್ಷಾ ಉಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿದರು. ಹೆಚ್ಚಿನ ಆವಶ್ಯಕತೆಯಿದ್ದಲ್ಲಿ ಕೂಡಲೇ ಟೆಂಡರ್‌ ಕರೆದು ಖರೀದಿಸುವಂತೆ ನಿರ್ದೇಶನ ನೀಡಿದರು.

ಜಾಗೃತಿಗೆ ಸೂಚನೆ
ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಕುರಿತಂತೆ ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿದರು. ಆಶಾ ಕಾರ್ಯ ಕರ್ತೆಯರು, ಅಂಗನವಾಡಿ ಕಾರ್ಯ ಕರ್ತೆಯರ ಮೂಲಕ ಮನೆ-ಮನೆಗಳಲ್ಲಿ ಅರಿವು ಮೂಡಿಸಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಸಮಿತಿ ರಚಿಸಿ
ಕೊರೊನಾ ವೈರಸ್‌ ನಿಯಂತ್ರಣ ಕುರಿತಂತೆ ಕಾರ್ಯ ನಿರ್ವಹಿಸಲು ಸರಕಾರ ಸೂಚಿಸಿರುವ ವಿವಿಧ ಅಧಿಕಾರಿಗಳ ನೇತೃತ್ವದ ಸಮಿತಿಗಳನ್ನು ರಚಿಸಬೇಕು. ಎಲ್ಲ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ಪ್ರತಿ ದಿನದ ವರದಿಯನ್ನು ನೀಡುವಂತೆ ಸೂಚಿಸಿದರು.

ಅರಿವು ಕಾರ್ಯಕ್ರಮ
ಕೊರೊನಾ ವೈರಸ್‌ ಶಂಕಿತರಿಗೆ ಚಿಕಿತ್ಸೆ ನೀಡಲು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 5 ಬೆಡ್‌ಗಳ ಕೊಠಡಿಯನ್ನು ಮತ್ತು ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 3 ಬೆಡ್‌ಗಳ ಕೊಠಡಿಯನ್ನು ಕಾದಿರಿಸ ಲಾಗಿದೆ. ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ ಅವರು ಸಭೆಯಲ್ಲಿ ಮಾಹಿತಿ ನೀಡಿದರು.

Advertisement

ಎಡಿಸಿ ಸದಾಶಿವ ಪ್ರಭು, ಡಿಎಚ್‌ಒ ಡಾ| ಸುಧೀರ್‌ ಚಂದ್ರ ಸೂಡಾ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌, ಮಣಿಪಾಲ ಕೆಎಂಸಿಯ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಿ
ಜಿಲ್ಲಾಡಳಿತ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅನಗತ್ಯ ವದಂತಿಗಳಿಂದ ಸಾರ್ವಜನಿಕರು ಭಯಭೀತರಾಗಬಾರದು. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next