Advertisement

ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ’

11:03 PM Jun 26, 2019 | Sriram |

ಮಡಿಕೇರಿ:ಜಿಲ್ಲೆಯಲ್ಲಿ ಡೆಂಗ್ವಿ ಮತ್ತು ಇನ್ನಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ, ರೋಗ ಪ್ರಕರಣಗಳು ಉಲ್ಬಣಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ.ಮೋಹನ್‌ ಸೂಚನೆ ನೀಡಿದ್ದಾರೆ.

Advertisement

ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ತಾಲೂಕು ಆರೋಗ್ಯ ಅಧಿಕಾರಿಗಳು, ವ್ಯೆದ್ಯಾಧಿಕಾರಿಗಳು ಆರೋಗ್ಯ ಸಹಾಯಕರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ ಜತೆ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ಸ್ಥಳೀಯ ಸಂಸ್ಥೆಗಳ ಸಮನ್ವಯ ದೊಂದಿಗೆ ದೈನಂದಿನ ಚಟುವಟಿಕೆ ನಿರ್ವಹಿಸುವಂತೆ ಸಲಹೆ ನೀಡಿದ ಅವರು, ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಗಳ ಮುಖ್ಯಸ್ಥರಿಗೆ ತಿಳಿಸಿದರು.

ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಸಾಂಕ್ರಾಮಿಕ ರೋಗಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಔಷಧಗಳನ್ನು ದಾಸ್ತಾನಿರಿಸಿಕೊಳ್ಳಲಾಗಿದೆ. ತುರ್ತು ಸಂಧರ್ಭಗಳಲ್ಲಿ ರೋಗಿಗಳ ಹೆಚ್ಚಿನ ಉನ್ನತ ಚಿಕಿತ್ಸೆಗೆ ಅನುಕೂಲವಾಗುವಂತೆ ರೆಪರಲ್ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿಗಳಿಗೆ ಸೂಚಿಸಿದರು.

ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರಗಳ, ಸಮುದಾಯ ಆರೋಗ್ಯ ಕೇಂದ್ರಗಳು ಗ್ರಾಮ ಪಂಚಾಯತಿಗಳ ಮೂಲಕ ಸಂಗ್ರಹಿಸಿ ನೀಡುವ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು ಕಡ್ಡಾಯವಾಗಿ ಜೈವಿಕ ವಿಶ್ಲೇಷಣೆಗೆ ಒಳಪಡಿಸಿ, ಫ‌ಲಿತಾಂಶದ ವರದಿ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಪ್ರತೀ ಮಾಹೆ ಮಾಹಿತಿ ನೀಡಬೇಕಿದೆ ಎಂದರು.

Advertisement

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯೆದ್ಯಾಧಿಕಾರಿಗಳು ಮತ್ತು ಅರೋಗ್ಯ ಸಹಾಯಕರುಗಳು ಗ್ರಾಮ ಪಂಚಾಯತಿಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ಕುಡಿಯುವ ನೀರಿನ ಗುಣಮಟ್ಟ, ಸುರಕ್ಷಿತ ಕುಡಿಯುವ ನೀರಿನ ಬಳಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರುಗಳು ಮನೆ ಮನೆ ಭೇಟಿ ನೀಡಿ ಜನ ಸಾಮಾನ್ಯರಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವಂತೆ ಡಿಎಚ್ಒ ಅವರು ಸಲಹೆ ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಡೆಂಗೀ ಮತ್ತು ಚಿಕನ್‌ಗುನ್ಯಾ ರೋಗಗಳ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳು: 2019 ರ ಮೇ, 16 ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಡೆಂಗಿ ದಿನಾಚರಣೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಚರಿಸಲಾಗಿದೆ. ಜೂನ್‌-2019 ನೇ ಮಾಹೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯನ್ವಯ ಜಿಲ್ಲಾದ್ಯಂತ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಚರಿಸಲಾಗುತ್ತಿದೆ. ಜುಲೈ-2019 ಮತ್ತು ಆಗಸ್ಟ್‌-2019 ನೇ ಮಾಹೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯನ್ವಯ ಜಿಲ್ಲಾದ್ಯಂತ ಡೆಂಗಿ ವಿರೋಧಿ ಮಾಸಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಚರಿಸಲು ಯೋಜಿಸಲಾಗಿದೆ.

ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಈಗಾಗಲೇ ಡೆಂಗೀಜ್ವರ ಪ್ರಕರಣಗಳು ವರದಿಯಾಗಿರುವುದರಿಂದ ಇವುಗಳ ಅಗತ್ಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಕ್ರಮವಹಿಸಲು ಸೂಚಿಸಲಾಗಿದೆ.

ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಡೆಂಗೀಜ್ವರದ ಅಗತ್ಯ ಬೆಂಬಲಾತ್ಮಕ ಚಿಕಿತ್ಸೆಯ ಔಷಧಗಳನ್ನು ದಾಸ್ತಾನಿರಿಸಿಕೊಳ್ಳಲಾಗಿದೆ. ತುರ್ತು ಸಂಧರ್ಭಗಳಲ್ಲಿ ರೋಗಿಗಳ ಹೆಚ್ಚಿನ ಉನ್ನತ ಚಿಕಿತ್ಸೆಗೆ ಅನುಕೂಲವಾಗುವಂತೆ ರೆಪರಲ್ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಡೆಂಗಿಜ್ವರ ಮತ್ತು ಚಿಕನ್‌ಗುನ್ಯ ರೋಗ ಪ್ರಕರಣಗಳನ್ನು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿಯೇ ಇಎಲ್ಐಎಸ್‌ಎ (ಇಐMಖಂ) ಪರೀಕ್ಷೆಯನ್ನು ಮಾಡುವ ವ್ಯವಸ್ಥೆಯನ್ನು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಸೂಚನೆಯಂತೆ ಪ್ರಯೋಗಾಲಯ ಪರೀಕ್ಷೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 10 ಎಚ್1 ಎನ್‌1, 1 ಲ್ಯಾಪ್ಟಸ್‌, ಡೆಂಗ್ಯು 6, ಚಿಕನ್‌ಗುನ್ಯ 3, ಟೈಪಾಯಿಡ್‌ 165, ನಾಯಿ ಕಡಿತ 2,195 ಪ್ರಕರಣಗಳು ವರದಿಯಾಗಿವೆ ಎಂದು ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಮಡಿಕೇರಿ ತಾಲ್ಲೂಕಿನಲ್ಲಿ 2 ಎಚ್1 ಎನ್‌1, 1 ಲ್ಯಾಪ್ಟಸ್‌ ಪಿರಾಸಿಸ್‌, ಡೆಂಗ್ಯು 2, ಚಿಕನ್‌ಗುನ್ಯ 1, ಟೈಪಾಯಿಡ್‌ 66, ನಾಯಿ ಕಡಿತ 451. ಸೋಮವಾರಪೇಟೆ ತಾಲ್ಲೂಕಿನಲ್ಲಿ 6 ಎಚ್1 ಎನ್‌1, ಡೆಂಗ್ಯು 2, ಚಿಕನ್‌ಗುನ್ಯ 2, ಟೈಪಾಯಿಡ್‌ 22, ನಾಯಿ ಕಡಿತ 1230. ವಿರಾಜಪೇಟೆ ತಾಲ್ಲೂಕಿನಲ್ಲಿ 2 ಎಚ್1ಎನ್‌1, ಡೆಂಗ್ಯು 2, ಟೈಪಾಯಿಡ್‌ 77, ನಾಯಿ ಕಡಿತ 514. ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಏಡೀಸ್‌ ಲಾರ್ವಾ
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ಏಡೀಸ್‌ ಲಾರ್ವಾ ಸಮೀಕ್ಷೆ ಕೈಗೊಳ್ಳುತ್ತಿದ್ದಾರೆ. ಏಡೀಸ್‌ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಲಾರ್ವಾ ಉತ್ಪತ್ತಿ ತಾಣಗಳ ನಿರ್ಮೂಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next