ಮಡಿಕೇರಿ: ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪವನ್ನು ಎದುರಿ ಸಲು ಅಗತ್ಯ ಮುನ್ನೆಚ್ಚರ ವಹಿಸ ಬೇಕು. ಜನ-ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ಎಲ್ಲ ಹಂತದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಮಳೆಹಾನಿ ಮುಂಜಾಗ್ರತೆ ಕ್ರಮ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಸಂಬಂಧ ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಈ ಹಿಂದೆ ಸಂಭವಿಸಿದ ಪ್ರಾಕೃತಿಕ ವಿಕೋಪ ಮನಗಂಡು ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಗ್ರಾ.ಪಂ., ತಾ.ಪಂ. ತಾಲೂಕು ಆಡಳಿತ, ಜಿಲ್ಲಾಡಳಿತ ಸೇರಿದಂತೆ ಎಲ್ಲ ಹಂತದಲ್ಲಿ ಕಾರ್ಯಪಡೆಯನ್ನು ರಚಿಸಿ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಉಪಸ್ಥಿತರಿದ್ದರು.
ಪರಿಶೀಲನೆ
ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ಬಿ.ಸಿ. ನಾಗೇಶ್ ಅವರು ಈ ಹಿಂದೆ ಗುಡ್ಡ ಕುಸಿತವಾಗಿದ್ದ ಮಕ್ಕಂದೂರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.