Advertisement

ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ

11:28 AM Apr 14, 2022 | Team Udayavani |

ಮಣಿಪಾಲ: ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಹೇಳಿದರು.

Advertisement

ಅವರು ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ಮತ್ತು ಮಲೇರಿಯಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಹೆಚ್ಚಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿಗೆ ಕಾರಣವಾಗುತ್ತಿದೆ. ಹೆಚ್ಚಿನ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಮತ್ತಿತರ ರೋಗಗಳು ಹರಡುತ್ತವೆ ಎಂದರು. ಸೊಳ್ಳೆ ನಿಯಂತ್ರಣಕ್ಕೆ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಗಳು ಕೈಗೊಳ್ಳಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.

ಬಹು ಮಹಡಿ ಕಟ್ಟಡಗಳ ಮೇಲ್ಛಾವಣಿಗಳಲ್ಲಿ ನೀರಿನ ಟ್ಯಾಂಕ್‌ಗಳನ್ನು ತೆರೆದಿಟ್ಟಿರುವ ಹಿನ್ನೆಲೆ ಅಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿವೆ. ನಗರಸಭೆ, ಪುರಸಭೆ ಹಾಗೂ ಗ್ರಾ.ಪಂ. ಸಿಬಂದಿ ಪರಿವೀಕ್ಷಣೆ ಮಾಡಿ, ಸಂಬಂಧ ಪಟ್ಟವರಿಗೆ ಸೂಚನೆ ನೀಡುವುದು ಸೂಕ್ತ ಎಂದರು. ಆರೋಗ್ಯ ಶಿಕ್ಷಣ ನೀಡಿ ಮಲೇರಿಯಾ, ಡೆಂಗ್ಯೂ ರೋಗಗಳು ಹೆಚ್ಚು ಕಂಡುಬರುವ ಪ್ರದೇಶ ಗುರುತಿಸುವುದರೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಸೊಳ್ಳೆಗಳ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು ಎಂದರು.

ಕಟ್ಟಡ ನಿರ್ಮಾಣ ಹಾಗೂ ಮೀನುಗಾರಿಕೆ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಹೊರ ರಾಜ್ಯಗಳಿಂದ ಕಾರ್ಮಿಕರು ಹಾಗೂ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹ ಹೆಚ್ಚು ಜನರು ಹೊರಗಿನಿಂದ ಬರುತ್ತಾರೆ. ಹಾಗಾಗಿ ಇದರಿಂದ ರೋಗಗಳು ಹರಡುವ ಸಾಧ್ಯತೆ ಇದ್ದು ಇದರಿಂದ ಎಚ್ಚರ ವಹಿಸುವುದು ಅಗತ್ಯ ಎಂದರು.

ಕಳೆದ ವರ್ಷಗಳಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣ ನಗರ ಪ್ರದೇಶಗಳಲ್ಲಿ ಹಾಗೂ ಕೊಲ್ಲೂರು ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದೆ. ಡೆಂಗ್ಯೂ, ಮಲೇರಿಯಾ, ಕೀಟಜನ್ಯ ರೋಗಗಳ ಸಾಮಾನ್ಯ ಲಕ್ಷಣಗಳು ಕಂಡುಬಂದಲ್ಲಿ ಅವರುಗಳಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುವುದರೊಂದಿಗೆ ರೋಗ ಹರಡುವುದನ್ನು ತಡೆಯಲು ಸಾಧ್ಯ ಎಂದರು. ಜಿ.ಪಂ. ಸಿಇಒ ಡಾ|ನವೀನ್‌ ಭಟ್‌, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next