ಬೆಂಗಳೂರು:ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ನಾಲ್ಕು ಕಡೆ ಗೆಲುವು ಸಾಧಿಸುತ್ತಿದ್ದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ದೂರವಾಣಿ ಮೂಲಕ ಮಾತನಾಡಿರುವುದು ಕುತೂಹಲ ಮೂಡಿಸಿದೆ.
ಉಪ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಕರೆ ಮಾಡಿದ ಅಭಿನಂದನೆ ಸಲ್ಲಿಸಿದ ಚಂದ್ರಬಾಬು ನಾಯ್ಡು, ಬಿಜೆಪಿ ವಿರುದ್ಧದ ಹೋರಾಟದಲ್ಲಿ ನಿಮ್ಮ ನೇತೃತ್ವದಲ್ಲಿ ನಾನೂ ಜತೆಗೂಡುವುದಾಗಿ ಹೇಳಿದರು. ನಿಮ್ಮ ಸಹಕಾರ ಇರಲಿ ಎಂದು ಗೌಡರು ಹೇಳಿದರು ಎನ್ನಲಾಗಿದೆ.
ಮುಂದಿನ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲು ಚಂದ್ರಬಾಬು ನಾಯ್ಡು ಅವರು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಚಂದ್ರಬಾಬು ನಾಯ್ಡು ನಂತರ ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡದಿರುವುಕ್ಕೆ ನರೇಂದ್ರಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎನ್‌ಡಿಎಯಿಂದ ಹೊರಗೆ ಬಂದಿದ್ದರು.
ಆ ನಂತರ ಕಾಂಗ್ರೆಸ್ ನೇತೃತ್ವದಲ್ಲಿ ರಚನೆಯಾಗುತ್ತಿರುವ ಮಹಾಘಟ್‌ಬಂಧನ್‌ಗೆ ಟಿಡಿಪಿ ಸೇರುವ ಕುರಿತು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.