ಚಿಕ್ಕಬಳ್ಳಾಪುರ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಜಾಗೃತರಾಗಿ ಕಾರ್ಯನಿರ್ವಹಿ ಸಬೇಕೆಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಸೂಚನೆ ನೀಡಿದರು.
ನಗರದ ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಬೇಸಿಗೆ ಸೆಕೆ ಆರಂಭವಾಗಿದ್ದುಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿತ್ವರಿತವಾಗಿ ಪರಿಹಾರ ಒದಗಿಸಲು ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ತಾಕೀತು ಮಾಡಿದರು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನಲ್ಲಿ ಅಭಿವೃದ್ಧಿಗಾಗಿ ಸರ್ಕಾರದಿಂದಈಗಾಗಲೇ ಬಿಡುಗಡೆಯಾಗಿರುವ ಅನುದಾನಮಾರ್ಚ್ ಅಂತ್ಯದೊಳಗೆ ಖರ್ಚು ಮಾಡಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಗುಣಮಟ್ಟ ಕಾಪಾಡಿ: ಕಳೆದ ಸಾಲಿನಲ್ಲಿ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆ ಅಗ್ರಸ್ಥಾನ ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ಸಹ ಪ್ರಥಮ ಸ್ಥಾನ ಕಾಯ್ದಿರಿಸಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಪರೀಕ್ಷಾರ್ಥಿಗಳಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಜೊತೆಗೆ ಪರೀಕ್ಷೆ ಎದುರಿಸಲು ಧೈರ್ಯ ತುಂಬಿಸಬೇಕೆಂದು ಸೂಚಿಸಿದರು. ತಾಲೂಕಿನಲ್ಲಿ ಕೆಲವೊಂದು ಭಾಗಗಳಲ್ಲಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಗಳು ನಡೆಯುತ್ತಿದ್ದು, ಅದರಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.
ಲೋಪ ಆಗಬಾರದು: ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರೈತರಿಗೆ ಅರಿವು ಮತ್ತು ಜಾಗೃತಿ ಮೂಡಿಸಿ ಕೃಷಿ ಇಲಾಖೆಯ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಬಲಬೆಲೆಯಲ್ಲಿ ರಾಗಿ ಖರೀದಿ ಮಾಡುತ್ತಿದ್ದು, ಲೋಪದೋಷ ಆಗದಂತೆ ನೋಡಿಕೊಳ್ಳಬೇಕೆಂದರು.
ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಇಂದ್ರಮ್ಮ, ತಾಪಂ ಸದಸ್ಯ ಸುಬ್ಬರಾಯಪ್ಪ, ನಾರಾಯಣಪ್ಪ, ಸತೀಶ್, ಶಾಲಿನಿಬಾಬು, ಮಂಜುಳಾ ಚಂದ್ರಶೇಖರ್, ಲತಾ ಶಿವಕುಮಾರ್, ನಂದಿ ರತ್ನಮ್ಮ, ಇಒ ಹರ್ಷವರ್ಧನ್ ಉಪಸ್ಥಿತರಿದ್ದರು.