ಚೆನ್ನೈ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ (ಎಪ್ರಿಲ್ 19) ನಡೆದಿದೆ. ತಮಿಳುನಾಡು ಸೇರಿ ದೇಶದ 21 ರಾಜ್ಯಗಳಲ್ಲಿ ಶುಕ್ರವಾರ ಮೊದಲ ಹಂತದಲ್ಲಿ ಜನರು ಮತ ಚಲಾಯಿಸಿದ್ದಾರೆ. ಆದರೆ ಇದೀಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಮರು ಮತದಾನಕ್ಕೆ ಆಗ್ರಹಿಸಿದ್ದಾರೆ.
ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾಗಿದೆ ಎಂದು ಹೆಚ್ಚಿನ ಸಂಖ್ಯೆಯ ಮತದಾರರಿಂದ ದೂರು ಕೇಳಿ ಬಂದಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಹೀಗಾಗಿ ಮರು ಮತದಾನ ನಡೆಯಬೇಕು ಎಂದು ಬಿಜೆಪಿ ಅಧ್ಯಕ್ಷ ಆಗ್ರಹಿಸಿದ್ದಾರೆ.
ಶುಕ್ರವಾರ ತಮಿಳುನಾಡಿನ 39 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆದಿದೆ. ರಾಜ್ಯದಲ್ಲಿ ಶೇ 62.19 ರಷ್ಟು ಜನರು ಮತ ಚಲಾಯಿಸಿದ್ದಾರೆ.
ಕೊಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಅಣ್ಣಾಮಲೈ, ಮತದಾರರ ಪಟ್ಟಿಯಿಂದ ಹಲವಾರು ಬಿಜೆಪಿ ಕಾರ್ಯಕರ್ತರ ಹೆಸರು ನಾಪತ್ತೆಯಾಗಿರುವುದರಿಂದ ರಾಜಕೀಯ ಹಸ್ತಕ್ಷೇಪ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.
ತಮಿಳುನಾಡಿನಲ್ಲಿ ಕಣದಲ್ಲಿರುವ 950 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಸುಮಾರು 6.23 ಕೋಟಿ ಮತದಾರರು ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದರು.