ಹೊಸದಿಲ್ಲಿ: ರಾಜ್ಯದ ಬಹುನಿರೀಕ್ಷಿತ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಅನುಮತಿ ನೀಡಲು ಮುಂದಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಖ್ಯಾತೆ ತೆಗೆದಿದೆ. ಮುಖ್ಯಮಂತ್ರಿ .ಪಳನಿಸ್ವಾಮಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿದ್ದಾರೆ.
ಈ ಹಿಂದೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದ ಪಳನಿಸ್ವಾಮಿ ಅವರು ಇಂದು ದೆಹಲಿಗೆ ಆಗಮಿಸಿ ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯೋಜನೆಗೆ ಅನುಮತಿ ನೀಡಿದಲ್ಲಿ ತಮಿಳುನಾಡಿನ ಹಿತಾಸಕ್ತಿಗೆ ದಕ್ಕೆಯಾಗುತ್ತದೆ ಎಂದಿರುವುದಾಗಿ ವರದಿಯಾಗಿದೆ.
ಕೆಲ ದಿನಗಳ ಹಿಂದೆ ಯೋಜನೆಗೆ ಅನುಮತಿ ಪಡೆಯುವ ಸಲುವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ಸಚಿವ ರೇವಣ್ಣ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಈ ವೇಳೆ ಕರ್ನಾಟಕ ಸರ್ಕಾರಕ್ಕೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಸಚಿವ ಗಡ್ಕರಿ ಭರವಸೆ ನೀಡಿದ್ದರು.
ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಕಾವೇರಿಯ ಹೆಚ್ಚುವರಿ ನೀರು ಸಂಗ್ರಹಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ರೂಪಿಸಲಾಗಿತ್ತು.