Advertisement

ಜಿಲ್ಲೆಯ 111 ಗ್ರಾಮಗಳಲ್ಲಿ ಟ್ಯಾಂಕರ್‌ ನೀರು ಸರಬರಾಜು

09:38 AM Apr 24, 2019 | Team Udayavani |

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 111 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಅಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಖ್‌ ತಿಳಿಸಿದರು.

Advertisement

ತಾಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 111 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನರೇಗಾ ಸದ್ಬಳಕೆಗೆ ಸಲಹೆ: ಜಿಲ್ಲೆಯಲ್ಲಿ 1300-1400 ಅಡಿ ವರೆಗೆ ಕೊಳವೆಬಾವಿ ಕೊರೆಸಿದರೂ ನೀರು ಲಭಿಸುತ್ತಿಲ್ಲ. ಹೀಗಾಗಿ ಜಲಮೂಲಗಳಾದ ಕೆರೆ-ಕುಂಟೆ ಹಾಗೂ ಕಲ್ಯಾಣಿಗಳನ್ನು ಅಭಿವೃದ್ಧಿಗೊಳಿಸಲು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ ಪ್ರಧಾನ ಕಾರ್ಯದರ್ಶಿಗಳು ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಎಲ್ಲರು ಸಂಘಟಿತರಾಗಬೇಕೆಂದರು.

ಬೀದಿದೀಪ ಅಳವಡಿಸಿ: ಜಿಲ್ಲೆಯಲ್ಲಿ ಪೂರ್ವಜರು ನಿರ್ಮಿಸಿರುವ ಕೆರೆ-ಕುಂಟೆಗಳ ಅಭಿವೃದ್ಧಿಗಾಗಿ ಗ್ರಾಮಸ್ಥರು ಕಾಳಜಿ ವಹಿಸಬೇಕು. ಗ್ರಾಮೀಣಾಭಿವೃದ್ಧಿ ಹಾಗೂ ನೈರ್ಮಲ್ಯ ಕಾಪಾಡಲು ಪೂಕರವಾಗಿರುವ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಪಂ ವ್ಯಾಪ್ತಿಯಲ್ಲಿ ಮೂಲಭೂತವಾಗಿ ರಸ್ತೆ, ಚರಂಡಿ, ಕುಡಿಯುವ ನೀರು ಪೂರೈಕೆ ಮಾಡಿ ಬೀದಿದೀಪಗಳನ್ನು ಅಳವಡಿಸಲು ಆದ್ಯತೆ ನೀಡಬೇಕೆಂದು ಸೂಚಿಸಿದರು.

ಜಿಲ್ಲೆಯಲ್ಲಿ ಅಂರ್ತಜಲ ಮಟ್ಟ ಕುಸಿದು ಜನ ಫ್ಲೋರೈಡ್‌ ಮಿಶ್ರಿತ ನೀರು ಸೇವೆ ಮಾಡಿ ಅನೇಕ ರೋಗರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಜಿಲ್ಲೆಗೆ ನೀರು ಶುದ್ಧೀಕರಣ ಘಟಕಗಳನ್ನು ಹೆಚ್ಚುವರಿಯಾಗಿ ಮಂಜೂರು ಮಾಡಬೇಕೆಂದು ಪತ್ರಕರ್ತರು ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನ ಕಾರ್ಯದರ್ಶಿಗಳು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟ ವೃದ್ಧಿಗೊಳಿಸುವ ಕಾಮಗಾರಿಗೆ ಆದ್ಯತೆ ನೀಡುವುದಾಗಿ ಪ್ರಕಟಿಸಿದರು.

Advertisement

ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್ತ ಹೆಗಡೆ, ತಾಲೂಕು ಪಂಚಾಯಿತಿ ಇಒ ಶಿವಕುಮಾರ್‌, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶ್ರೀನಾಥ್‌ಗೌಡ, ಹೊಸಪೇಟೆ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್‌, ಪಿಡಿಒ ಮಧು, ಕಾರ್ಯದರ್ಶಿ ಮಹಾಲಿಂಗಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಲತೇಶ್‌,ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಬೋಜಣ್ಣ ಉಪಸ್ಥಿತರಿದ್ದರು.

ಸುಧಿœಚಿತ್ರ,ಏಪ್ರಿಲ್‌23 ಎಸ್‌.ಡಿ.ಎಲ್‌.ಪಿ01 ಶಿಡ್ಲಘಟ್ಟ ತಾ. ಹೊಸಪೇಟೆ ಗ್ರಾಪಂ ಚೊಕ್ಕಂಡಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಜಾನುವಾರುಗಳಿಗೆ ನೀರು ಕುಡಿಯುಲು ನಿರ್ಮಿಸಿರುವ ತೊಟ್ಟಿಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಖ್‌ ಪರಿಶೀಲಿಸಿ ಗ್ರಾಮಸ್ಥರ ಅಹವಾಲು ಆಲಿಸಿದರು.

ಗ್ರಾಮದಲ್ಲಿ ಎಲ್ಲರೂ ಅನ್ಯೋನ್ಯವಾಗಿ ಜೀವನ ಮಾಡುವ ಜೊತೆಗೆ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳ ಕುರಿತು ಪಂಚಾಯಿತಿಯಲ್ಲಿ ತೀರ್ಮಾನ ತೆಗೆದುಕೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳಿಗೆ ವರದಿ ಸಲ್ಲಿಸಿದರೆ ತ್ವರಿತವಾಗಿ ಅಭಿವೃದ್ಧಿ ಕಾಮಗಾರಿ ನಡೆಸಲು ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಕಲ್ಪಿಸಲಿದ್ದಾರೆ.
-ಎಲ್‌.ಕೆ.ಅತೀಖ್‌, ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಅಭಿವೃದ್ಧಿ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next