ಬೆಂಗಳೂರು : ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿರುವ ನಂದಮೂರಿ ತಾರಕರತ್ನ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು ಅರೋಗ್ಯ ಸ್ಥಿತಿ ಹದಗೆಟ್ಟಿದೆ ಎನ್ನುವ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾರಕರತ್ನ ಅವರಿಗೆ ಗುರುವಾರ ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದು. ಗುರುವಾರ ನಡೆದ ಎಂಆರ್‌ಐ ಸ್ಕ್ಯಾನಿಂಗ್‌ಗೆ ಸಂಬಂಧಿಸಿದಂತೆ ಸಂಪೂರ್ಣ ವಿವರಗಳೊಂದಿಗೆ ಹೆಲ್ತ್ ಬುಲೆಟಿನ್ ಬಿಡುಗಡೆಯಾಗುವ ಸಾಧ್ಯತೆಯಿದೆ. ಆನಂತರವಷ್ಟೇ ನಂದಮೂರಿ ತಾರಕ ರತ್ನ ಅವರ ಆರೋಗ್ಯದ ಬಗ್ಗೆ ಸಂಪೂರ್ಣ ಸ್ಪಷ್ಟನೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ತಿಂಗಳು 27ರಂದು ಕುಪ್ಪಂನಲ್ಲಿ ನಡೆದ ನಾರಾ ಲೋಕೇಶ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ತಾರಕರತ್ನ ಭಾಗವಹಿಸಿದ್ದರು. ಇದೇ ವೇಳೆ ತಾರಕರತ್ನ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಸ್ಪಂದಿಸಿದ ಟಿಡಿಪಿ ಮುಖಂಡರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಅಲ್ಲದೆ ವಿದೇಶಿ ವೈದ್ಯರನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ ಎನ್ನುತ್ತಾರೆ ಅವರ ಕುಟುಂಬಸ್ಥರು.
ತಾರಕರತ್ನ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಮತ್ತೊಂದೆಡೆ ತಾರಕರತ್ನ ಆರೋಗ್ಯದ ಬಗ್ಗೆ ನಾನಾ ರೀತಿಯ ಪ್ರಚಾರಗಳು ನಡೆಯುತ್ತಿವೆ.
ಇದನ್ನೂ ಓದಿ: ತಡೆಯಲಾಗದ ಅನಿಯಂತ್ರಿತ ಮೂತ್ರ ವಿಸರ್ಜನೆ ಮತ್ತು ಮೂತ್ರಶಂಕೆಯ ಅವಸರ