ಬೆಂಗಳೂರು: ಪೂಜನೀಯ ಗೋಮಾತೆಯನ್ನು ಕೊಂದು ಅಕ್ರಮ ಕಸಾಯಿಖಾನೆಗಳನ್ನು ತೆರೆದು ಗೋವುಗಳ ಮಾಂಸ ಸಾಗಾಣಿಕೆ ಮತ್ತು ಶೇಖರಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನಹ ಜಾರಿಗೆ ತಂದು ಪ್ರಾಣಿ ಕ್ರೌರ್ಯ ತಡೆಗಟ್ಟಲು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಮತ್ತು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರುಗಳನ್ನೊಳಗೊಂಡ ವಿಶೇಷ ಕಾರ್ಯಪಡೆ (ಟಾಸ್ಕ್ ಪೋರ್ಸ್ ಕಮಿಟಿ) ಸ್ಥಾಪಿಸಲು ಚಿಂತಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವರಾದ ಪ್ರಭು ಬಿ.ಚವ್ಹಾಣ್ ತಿಳಿಸಿದರು.
ವಿಕಾಸಸೌಧದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅನಧಿಕೃತವಾಗಿ ಕಸಾಯಿ ಖಾನೆಗಳನ್ನು ತೆರೆದು ಪ್ರಾಣಿಗಳನ್ನು ವಧೆ ಮಾಡುತ್ತಿರುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಟಾಸ್ಕ್ ಪೋರ್ಸ್ ಕಮಿಟಿ ಸ್ಥಾಪಿಸುವುದರಿಂದ ಪ್ರಾಣಿ ಕ್ರೌರ್ಯ ತಡೆಗಟ್ಟಲು ಸಾಧ್ಯವಾಗುತ್ತದೆ. ಇದರಿಖದ ಮೂಕ ಪ್ರಾಣಿಗಳನ್ನು ರಕ್ಷಣೆ ಜತೆಗೆ ಕಸಾಯಿಖಾನೆಗೆ ಸಾಗಿಸುವುದನ್ನು ತಡೆಯುವುದಾಗಿದೆ ಎಂದು ಅಭಿಪ್ರಾಯಿಸಿದರು.
ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ ಮತ್ತು ಶೇಖರಣೆ ಸಂಬಂಧ ಪ್ರಕರಣಗಳಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಪ್ರತಿ ವಾದಿಯನ್ನಾಗಿ ನ್ಯಾಯಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ವಕೀಲರುಗಳನ್ನು ಪ್ರತಿ ಜಿಲ್ಲೆಯಲ್ಲೂ ನೇಮಕ ಮಾಡಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಜಿಲ್ಲಾ ಪ್ರಾಣಿ ದಯಾ ಸಂಘದ ಸಮಿತಿಗಳು ರಚನೆಯಾಗಿರುವುದಿಲ್ಲ. ಅವುಗಳನ್ನು ಪುನರ್ ರಚನೆ ಮಾಡಿ ಹೊಸ ಸದಸ್ಯರುಗಳನ್ನು ನೇಮಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಈಗಾಗಲೇ ರಾಜ್ಯದ 25 ಜಿಲ್ಲೆಗಳಲ್ಲಿ ಜಿಲ್ಲೆಗೊಂದು ಸರ್ಕಾರಿ ಗೋಶಾಲೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೂಳಿದ ಜಿಲ್ಲೆಗಳಲ್ಲಿ ಗೋಶಾಲೆಗೆ ಜಾಗ ಗುರ್ತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪ್ರಾಣಿ ಆರೈಕೆ ಮತ್ತು ಪ್ರಾಣಿ ಕಲ್ಯಾಣದ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗಳಲ್ಲೂ ಪ್ರಾಣಿ ಆರೈಕೆ ಮತ್ತು ಕಲ್ಯಾಣ ಕ್ಲಬ್ ಸ್ಥಾಪಿಸಿ, ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಭು ಚವ್ಹಾಣ್ ಹೇಳಿದರು.
ಬೆಂಗಳೂರಿನಲ್ಲಿ ಇತ್ತಿಚೆಗೆ ನಡೆದ ಬೀದಿ ನಾಯಿ ಮೇಲೆ ಕಾರ್ ಹತ್ತಿಸಿ ಸಾಯಿಸಿದ ಪ್ರಕರಣದಲ್ಲಿ ಬಂಧಿತರಾದವರು ಕಡಿಮೆ ದಂಡ ಪಾವತಿಸಿ, ಬಿಡುಗಡೆಯಾಗಿದ್ದಾರೆ. ಇಂತಹ ಪ್ರಕರಣಗಳು ಮರುಕಳುಹಿಸುವುದನ್ನು ಹಾಗೂ ಪ್ರಾಣಿ ಕ್ರೌರ್ಯ ತಡೆಗಟ್ಟಲು ಇಂತಹ ಪ್ರಕರಣಗಳಲ್ಲಿ ಬಂಧಿತರಾದವರಿಗೆ ರೂ.50 ಸಾವಿರ ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸುವ ಕುರಿತು ಸದಸ್ಯರಿಂದ ಕೇಳಿ ಬಂದ ಅಭಿಪ್ರಾಯಕ್ಕೆ ಸಂಬಂಧಿಸಿದಂತೆ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ನಾಮನಿರ್ದೇಶಿತ ಸದಸ್ಯರುಗಳನ್ನು ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ.ಫಾಹೀಮ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ನಿರ್ದೇಶಕ ಮಂಜುನಾಥ್ ಪಾಳೆಗಾರ್ ಸೇರಿದಂತೆ ಹಲವರಿದ್ದರು.