ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡಾಗ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಮೇಯರ್ ಜಿ.ಪದ್ಮಾವತಿ ಹೇಳಿದ್ದಾರೆ.
ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ನಿವೃತ್ತ ಹಾಗೂ ಉತ್ತಮ ನೌಕರರಿಗೆ ಸನ್ಮಾನ ಮಾಡಿ ಮಾತನಾಡಿದ ಅವರು, ಶೋಷಿತ ವರ್ಗಕ್ಕೆ ಹಕ್ಕುಗಳನ್ನು ಕೊಟ್ಟ ಮಹಾನ್ ನಾಯಕ ಅಂಬೇಡ್ಕರ್ ಎಂದು ಬಣ್ಣಿಸಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವಂತಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಭಾಂಗಣದ ತುಂಬಿರಬೇಕಿತ್ತು. ಆದರೆ, ಪೌರಕಾರ್ಮಿಕರ ಸಮಾರಂಭದಲ್ಲಿ ಪೌರಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಆಯುಕ್ತ ಎನ್. ಮಂಜುನಾಥ ಪ್ರಸಾದ್ ಮಾತನಾಡಿ, ಅಂಬೇಡ್ಕರ್ ಅವರ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿ ಎಲ್ಲರೂ ಕರ್ತವ್ಯ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ 250 ಪೌರಕಾರ್ಮಿಕರಿಗೆ ಉತ್ತಮ ನೌಕರರಿಗೆ ಪೌರ ಸನ್ಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 39 ಪೌರ ಕಾರ್ಮಿಕರಿಗೆ 150 ಗ್ರಾಂ ಬೆಳ್ಳಿ ಫಲಕ ನೀಡಲಾಯಿತು.