Advertisement
ಕರ್ನಾಟಕಕ್ಕೆ ಕೇವಲ 6,498 ಕೋಟಿ ರೂ. ಹಂಚಿಕೆ: ಈ ವಿಚಾರವಾಗಿ ಅಂಕಿ ಅಂಶಗಳ ಸಹಿತ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಸಿಎಂ ಸಿದ್ದರಾಮಯ್ಯ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ 6,498 ಕೋಟಿ ರೂಪಾಯಿ. ಈ ಅನ್ಯಾಯದ ವಿರುದ್ಧ ಜಾತಿ ಧರ್ಮ, ಪಕ್ಷ – ಪಂಥದ ಭೇದವಿಲ್ಲದೆ ಧ್ವನಿ ಎತ್ತುವ ಶಪಥ ಪ್ರತಿಯೊಬ್ಬ ಕನ್ನಡಿಗನೂ ಮಾಡಬೇಕಾಗಿದೆ. ಇಂತಹದ್ದೊಂದು ಪ್ರಮಾಣ ವಚನ ಸ್ವೀಕಾರಕ್ಕೆ ಅನ್ಯಾಯದ ವಿರುದ್ಧ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನೂ ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ 31,962 ಕೋಟಿ ರೂ, ಬಿಹಾರಕ್ಕೆ 17,921 ಕೋಟಿ ರೂ, ಮಧ್ಯಪ್ರದೇಶಕ್ಕೆ 13,987 ಕೋಟಿ ರೂ. ಮತ್ತು ರಾಜಸ್ಥಾನಕ್ಕೆ 10,737 ಕೋಟಿ ರೂಪಾಯಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ. ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಅಭಿವೃದ್ಧಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಈ ರಾಜ್ಯಗಳಿಗಾಗಿ ಕನ್ನಡಿಗನ ಬೆವರಗಳಿಕೆ ಯಾಕೆ ಪೋಲಾಗಬೇಕು ಎನ್ನುವುದು ನಮ್ಮ ಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರಪ್ರದೇಶಕ್ಕೆ ಶೇ 17.93, ಬಿಹಾರಕ್ಕೆ 10.05, ರಾಜಸ್ಥಾನಕ್ಕೆ 6.02 ಮತ್ತು ಮಧ್ಯಪ್ರದೇಶಕ್ಕೆ 7.85ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ 3.6. ತೆರಿಗೆ ಹಂಚಿಕೆಗಾಗಿ ನಿಗದಿ ಪಡಿಸಲಾಗಿರುವ ಮಾನದಂಡದಲ್ಲಿಯೇ ಕೇಂದ್ರ ಸರ್ಕಾರದ ಪ್ರಗತಿ ವಿರೋಧಿ ಧೋರಣೆ ಸ್ಪಷ್ಟವಾಗಿದೆ. ಅಭಿವೃದ್ಧಿಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಾಯಿಸಬೇಕೆಂದು ನಾವು ಒತ್ತಾಯಿಸುತ್ತಲೇ ಬಂದಿದ್ದರೂ ಕೇಂದ್ರ ಸರ್ಕಾರ ಕಿವುಡಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಕ್ಕೆ 79,770 ಕೋಟಿ ರೂ. ನಷ್ಟ
14ನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.713 ಎಂದು ನಿಗದಿಪಡಿಸಿತ್ತು. ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.647ಕ್ಕೆ ಇಳಿಸಿತು. ಇದರಿಂದ 2021-26 ರವರೆಗಿನ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು 62,275 ಕೋಟಿ ರೂಪಾಯಿಯ ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯವನ್ನು ಪರಿಗಣಿಸಿದ್ದ ಹಣಕಾಸು ಆಯೋಗ ವಿಶೇಷ ಅನುದಾನದ ರೂಪದಲ್ಲಿ 5,495 ಕೋಟಿ ರೂ. ನೀಡುವಂತೆ ಶಿಫಾರಸು ಮಾಡಿತ್ತು. ಇದನ್ನು ಕೂಡಾ ಕೇಂದ್ರ ಸರ್ಕಾರ ನೀಡದೆ ಅನ್ಯಾಯ ಎಸಗಿದೆ.
Related Articles
Advertisement
ವಿತ್ತ ಸಚಿವರಿಂದ ರಾಜ್ಯಕ್ಕೆ ಅನ್ಯಾಯಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ
ನಿರ್ಮಲಾ ಸೀತಾರಾಮನ್ ಈ ಶಿಫಾರಸು ನಿರಾಕರಿಸಿರುವ ಕಾರಣ ಆ ಹಣವೂ ಬರಲಿಲ್ಲ. ಇದಲ್ಲದೆ, ಹದಿನೈದನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್ ರಿಂಗ್ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ.
ದಕ್ಷಿಣ ಭಾರತದ ರಾಜ್ಯಗಳದ್ದೂ ಕೊಡುಗೆಯಿದೆ:
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಎರಡು ಚಕ್ರಗಳಂತೆ. ಈ ಎರಡೂ ಚಕ್ರಗಳೂ ಸಮಾನವಾಗಿ, ಸುಗಮವಾಗಿ ತಿರುಗಿದಾದ ಮಾತ್ರವೇ ದೇಶವು ನಾಗಾಲೋಟದಿಂದ ಪ್ರಗತಿಯ ಪಥದಲ್ಲಿ ಮುನ್ನಡೆಯಲು ಸಾಧ್ಯ. ವಿಪರ್ಯಾಸವೆಂದರೆ, ಇತ್ತೀಚಿನ ವರ್ಷಗಳಲ್ಲಿ ಸಂಪನ್ಮೂಲ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆಯು ಕರ್ನಾಟಕವೂ ಸೇರಿ ಭಾರತದ ದಕ್ಷಿಣದ ರಾಜ್ಯಗಳ ನಿರಂತರ ಅನ್ಯಾಯದ ಶೂಲಕ್ಕೆ ಕೊರಳೊಡ್ಡುವಂತೆ ಮಾಡಿದೆ. ದೇಶವು ಐದು ಟ್ರಿಲಿಯನ್ ಅರ್ಥ ವ್ಯವಸ್ಥೆಯಾಗುವ ಕನಸು ಕಾಣುತ್ತಿದೆ ಎಂದರೆ ಅದರ ಹಿಂದೆ ದೇಶದ ಪ್ರಗತಿಗೆ ಅನನ್ಯವಾದ ಕೊಡುಗೆ ನೀಡುತ್ತಿರುವ, ದೇಶದ ಸಂಪತ್ತಿಗೆ ಅಗಾಧವಾದ ಸಂಪನ್ಮೂಲ ಒದಗಿಸುತ್ತಿರುವ ಕರ್ನಾಟಕದ ಸಹಿತ ದಕ್ಷಿಣ ಭಾರತದ ರಾಜ್ಯಗಳ ವಿಶೇಷ ಕೊಡುಗೆಯಿದೆ ಎನ್ನುವುದನ್ನು ಮರೆಯಬಾರದಲ್ಲವೇ? ಎಂದು ಸಿದ್ದರಾಮಯ್ಯ ಕೇಂದ್ರಕ್ಕೆ ಪ್ರಶ್ನಿಸಿದ್ದಾರೆ.