ಚೆನ್ನೈ: ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲು ನಾಲ್ಕು ದಿನ ಇರುವ ಮುನ್ನವೇ ಡಿಎಂಕೆ ವರಿಷ್ಠ ಎಂ.ಕೆ.ಸ್ಟಾಲಿನ್ ಅವರ ಅಳಿಯ ಹಾಗೂ ಅವರ ನಿಕಟವರ್ತಿಗಳ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಶುಕ್ರವಾರ(ಏಪ್ರಿಲ್ 02) ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಇಂದು ಬೆಳಗ್ಗೆ ಸ್ಟಾಲಿನ ಅಳಿಯ ಸಬರೀಸನ್ ಮತ್ತು ಅವರ ನಿಕಟವರ್ತಿಗಳಿಗೆ ಸೇರಿದ ಚೆನ್ನೈನಲ್ಲಿರುವ ನಾಲ್ಕು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳು ಹೇಳಿವೆ.
ಸ್ಟಾಲಿನ್ ನೇತೃತ್ವದ ಡಿಎಂಕೆ ವಲಯದೊಳಗೆ ಸಬರೀಸನ್ ಪ್ರಭಾವಶಾಲಿ ವ್ಯಕ್ತಿಯಾಗಿದ್ದು, ಪಕ್ಷದ ಆಂತರಿಕ ಬೆಳವಣಿಗೆ ಹಾಗೂ ಮಾತುಕತೆಯ ಮುಂದಾಳತ್ವ ವಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ ಡಿಎಂಕೆ ಅಣ್ಣಾ ನಗರ ಕ್ಷೇತ್ರದ ಅಭ್ಯರ್ಥಿ ಎಂಕೆ ಮೋಹನ್ ಅವರ ಪುತ್ರ ಕಾರ್ತಿಕ್ ಮೋಹನ್ ಅವರ ನಿವಾಸದ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಚುನಾವಣಾ ಪ್ರಚಾರಕ್ಕಾಗಿ ಹಣ ಸಂಗ್ರಹಿಸಿಟ್ಟಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಟಾಲಿನ್ ಅವರ ಪುತ್ರಿ ಸೆಂಥಮರೈ ಮತ್ತು ಸಬರೀಸನ್ ವಾಸವಾಗಿರುವ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವುದಾಗಿ ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.
ಈ ಹಿಂದೆ ಕಾಂಗ್ರೆಸ್ ಪಕ್ಷ ಕೂಡಾ ತಮ್ಮ ಪ್ರತಿಸ್ಪರ್ಧಿಗಳನ್ನು ಹಣಿಸಲು ಈ ಕಾಯ್ದೆಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿತ್ತು. ಈಗ ಬಿಜೆಪಿ ಸರ್ಕಾರ ಕೂಡಾ ಅದನ್ನೇ ಮಾಡುತ್ತಿದೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಎಂಕೆ ಸ್ಟಾಲಿನ್ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.