ಬಳ್ಳಾರಿ: ಆಂಧ್ರಪ್ರದೇಶದ ತೆಲುಗುದೇಶಂ (ಟಿಡಿಪಿ) ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತೊರೆದಿರುವುದು ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲಿದೆಯೇ?ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆ ಬಳ್ಳಾರಿಯಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಗಳು ಇಂತಹದ್ದೊಂದು ಪ್ರಶ್ನೆ ಹುಟ್ಟು ಹಾಕಿದೆ.
ಎನ್‌ಡಿಎ ಮೈತ್ರಿಕೂಟದಿಂದ ಟಿಡಿಪಿ ಹೊರಬಂದ ಬೆನ್ನಲ್ಲೇ ಆಂಧ್ರಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿಭಾಗದಲ್ಲಿ ನೆಲೆಸಿರುವ ಆಂಧ್ರ ಮೂಲದ ವಲಸಿಗರ ಮಧ್ಯೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬಾರದೆಂಬ ಪ್ರಚಾರ ಸದ್ದಿಲ್ಲದೆ ನಡೆಯುತ್ತಿದೆ ಎನ್ನಲಾಗುತ್ತಿದೆ.
ಕಳೆದ 2014ರ ಲೋಕಸಭಾ ಚುನಾವಣೆ ವೇಳೆ ಅಂದಿನ ಯುಪಿಎ ಸರ್ಕಾರ ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಿತ್ತು. ಅಲ್ಲದೆ, ಆಂಧ್ರಪ್ರದೇಶಕ್ಕೆ ಐದು ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡುವುದಾಗಿಯೂ ಘೋಷಿಸಿತ್ತು. ಇದಕ್ಕೆ ಪ್ರತಿಯಾಗಿ ಅಧಿಕಾರಕ್ಕೆ ಬಂದರೆ 10 ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡುವುದಾಗಿ ಬಿಜೆಪಿ ಘೋಷಿಸಿತ್ತು. ಹೀಗಾಗಿ, ತೆಲುಗುದೇಶಂ ಪಕ್ಷ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಕಳೆದರೂ ವಿಶೇಷ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಟಿಡಿಪಿ ಮೈತ್ರಿ ಮುರಿದುಕೊಂಡಿದೆ.
ಕೇಂದ್ರ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಆಂಧ್ರಪ್ರದೇಶಕ್ಕೆ ಅನ್ಯಾಯ ಮಾಡಿದೆ. ಹೀಗಾಗಿ ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬಾರದು ಎಂದು ಆಂಧ್ರ ಮೂಲದ ಕೆಲವರು ಸದ್ದಿಲ್ಲದೆ ಪ್ರಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಜಿಲ್ಲೆಗಳಲ್ಲಿ ಆಂಧ್ರದಿಂದ ವಲಸೆ ಬಂದು ನೆಲೆಸಿರುವ ಸಾಕಷ್ಟು ಜನರಿದ್ದಾರೆ. ಟಿಡಿಪಿ ಈ ಮತದಾರರನ್ನು ತಲುಪುವ ಪ್ರಯತ್ನ ನಡೆಸಿದೆ ಎನ್ನಲಾಗಿದೆ.