ಬೆಂಗಳೂರು: ದಶಕಗಳ ಹಿಂದೆ ಆರಂಭವಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿರುವುದು ಸರಿಯಲ್ಲ.
ಎಲ್ಲ ಅರ್ಹ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಿ, ಅಲ್ಲಿನ ಶಿಕ್ಷಕರಿಗೆ ಸೂಕ್ತ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ನೊಂದ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಅಹೋರಾತ್ರಿ ಸತ್ಯಾಗ್ರಹ ಆರಂಭಿಸಿದ್ದಾರೆ.
1987ರಿಂದ 1994-95ರ ಅವಧಿಯಲ್ಲಿ ಆರಂಭವಾಗಿರುವ ಸಾವಿರಾರು ಶಾಲೆಗಳಿಗೆ ಸರ್ಕಾರ ವೇತನಾನುದಾನ ನೀಡಿದೆ. ಆದರೆ, ಇದೇ ಅವಧಿಯಲ್ಲಿ ಆರಂಭವಾದ ಸುಮಾರು 87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಸರ್ಕಾರ ಇಲ್ಲಸಲ್ಲದ ಆಕ್ಷೇಪಣೆ ಒಡ್ಡುತ್ತಿದೆ.
87 ಶಾಲೆಗಳ ಕಡತಕ್ಕೆ ಆರ್ಥಿಕ ಅನುಮೋದನೆ ನೀಡದೆ ಹಿಂದಕ್ಕೆ ಕಳುಹಿಸಿದೆ. ಇದರಿಂದ ಸಾವಿರಾರು ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಸರ್ಕಾರದಿಂದ ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ್ ಹೇಳಿದ್ದಾರೆ.
87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಸಂಬಂಧ 2017ರ ಸೆ.15 ಮತ್ತು 27ರಂದು ನಡೆದ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದರು. ಮಾಜಿ ಶಿಕ್ಷಣ ಸಚಿವ ತನ್ವೀರ್ ಕೂಡ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿದ್ದರು.
ಈ ಸಂಬಂಧ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿಯವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ನೊಂದ ಶಿಕ್ಷಕರು ಹತ್ತಾರು ಬಾರಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಸರ್ಕಾರ 87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವವರೆಗೂ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.