Advertisement

ಶಿಕ್ಷಕರ ಸಮಸ್ಯೆ ಪರಿಹರಿಸುವ ಭರವಸೆ

10:50 PM Sep 27, 2019 | Lakshmi GovindaRaju |

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ, ನೂತನ ಪಿಂಚಣಿ ವ್ಯವಸ್ಥೆ ಗೊಂದಲ, ಪದವೀಧರ ಶಿಕ್ಷಕರ ನೇಮಕಾತಿ ವಿಚಾರ ಸೇರಿ ಶಿಕ್ಷಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಭರವಸೆ ನೀಡಿದ್ದಾರೆ.

Advertisement

ಶಿಕ್ಷಕರ ಸಂಘವು ಶುಕ್ರವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರ ಸಮಸ್ಯೆಗಳು ಗಮನಕ್ಕೆ ಬಂದಿವೆ. ಶಿಕ್ಷಕರು ಬೀದಿ ಗಿಳಿದು ಹೋರಾಟಕ್ಕೆ ಮುಂದಾಗುವುದು ಬೇಡ. ಸಾಧ್ಯವಾದಷ್ಟು ಮಟ್ಟಿಗೆ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಪ್ರಯತ್ನ ಮಾಡಲಿದ್ದೇನೆ. ಅ.4ರಂದು ನಡೆಯಲಿರುವ ಶಿಕ್ಷಕರ ಸಂಘ ಪದಾಧಿಕಾರಿಗಳ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಶಿಕ್ಷಕರ ವರ್ಗಾವಣೆ ಮಾಡುವುದರಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗಲಿದೆ. ಆದರೆ, ಈಗಾಗಲೇ ಪ್ರಕ್ರಿಯೆಗೆ ಚಾಲನೆ ನೀಡಿರುವುದರಿಂದ ಮತ್ತೆ ಸ್ಥಗಿತಗೊಳಿಸುವುದು ಸರಿಯಲ್ಲ. ಹೀಗಾಗಿ, ಮುಂದಿನ ವರ್ಷದಿಂದ ಏಪ್ರಿಲ್‌ ತಿಂಗಳಿನೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರ ಸಂಘದಿಂದ ಸಚಿವರಿಗೆ ಮನವಿ ಮಾಡಲಾಯಿತು. 6ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25 ಮತ್ತು 30 ವರ್ಷದ ಬಡ್ತಿಯನ್ನು ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕರ ಹುದ್ದೆಯಲ್ಲಿರುವರೆಗೂ ಬಡ್ತಿ ನೀಡಬೇಕು. ಶಿಕ್ಷಕರ ವೇತನ ತಾರತಮ್ಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next