ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆ ಸುತ್ತಿ ರುವ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು ನಿರಾ ಕರಿಸಿ ರುವ ಹೈಕೋರ್ಟ್, ನಿಗದಿಯಂತೆ ಹಾಗೂ ಕಾನೂನು ರೀತಿ ಪ್ರಕ್ರಿಯೆ ಮುಂದುವರಿಸುವಂತೆ ಹೇಳಿದೆ.
ಈ ಸಂಬಂಧ ಕೆಎಟಿ ಆದೇಶ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪಿ.ಕೆ.ಚಂದ್ರಕಾಂತ್ ಮತ್ತಿತರ ನೂರಕ್ಕೂ ಹೆಚ್ಚು ಶಿಕ್ಷಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಎಲ್. ನಾರಾಯಣಸ್ವಾಮಿ ಮತ್ತು ನ್ಯಾ.ಆರ್. ದೇವದಾಸ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು.
ನಿಗದಿಯಂತೆ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮುಂದುವರಿಸಿ ಅದನ್ನು ಅಂತಿಮಗೊಳಿಸಬಹುದು. ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವು ದಿಲ್ಲ. ಆದರೆ, ಅರ್ಜಿದಾರರು ನೀಡಿರುವ ಸಲಹೆಗಳನ್ನು ಕಾನೂನು ಹಾಗೂ ನಿಯಮಗಳ ಪ್ರಕಾರ ಪರಿಶೀಲಿ ಸಬೇಕು ಎಂದು ಶಿಕ್ಷಣ ಇಲಾಖೆಗೆ ಆದೇಶಿಸಿದ ನ್ಯಾಯ ಪೀಠ, ಅರ್ಜಿಗಳನ್ನು ಇತ್ಯರ್ಥಪಡಿಸಿತು.
ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್, ಈಗಾಗಲೇ ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯು ತ್ತಿದೆ. ಈ ಹಂತದಲ್ಲಿ ಕೋರ್ಟ್ ಹಸ್ತಕ್ಷೇಪ ಸಮಂಜಸ ವಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವರ್ಗಾವಣೆ ನಿಯಮಗಳು ಅವೈಜ್ಞಾನಿಕವಾಗಿವೆ. ಅವುಗಳನ್ನು ಸರಿಪಡಿಸಲು ಕೆಲವು ಸಲಹೆಗಳನ್ನು ನೀಡಲಾಗುತ್ತಿದ್ದು ಅವುಗಳನ್ನು ಪರಿಶೀಲಿಸಿ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಬೇಕೆಂದು ಕೋರಿದರು.