ಧಾರವಾಡ: ಪರೀಕ್ಷಾ ನಕಲು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಕಡಿವಾಣ ಹಾಕಲು ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ. ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ಯಾವುದೇ ಕಾರಣಕ್ಕೂ ಬಹಿಷ್ಕಾರ ಹಾಕಬಾರದು ಎಂದು ಪ್ರಾಥಮಿಕ-ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದರು.
ನಗರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಶಿಕ್ಷಣ ಪ್ರೀತಿ ಹೆಚ್ಚಿಸಲು ಎಲ್ಲ ಜಿಲ್ಲೆಗಳ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾರದಲ್ಲಿ ಕನಿಷ್ಠ ಐದು ಶಾಲೆಗಳಿಗೆ ಭೇಟಿ ನೀಡಿ ಸಂವಾದ ನಡೆಸಿ, ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.
ಮಕ್ಕಳಲ್ಲಿ ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ತಡೆ ಮೊದಲಾದ ವಿಷಯಗಳ ಜಾಗೃತಿ ಮೂಡಿಸಲು ಮೀನಾ ತಂಡಗಳನ್ನು ಕ್ರಿಯಾಶೀಲಗೊಳಿಸಬೇಕು. ಶೈಕ್ಷಣಿಕ ಪ್ರಗತಿ ಚುರುಕುಗೊಳಿಸಲು ಎಲ್ಲ ಮಕ್ಕಳ ಪಾಲಕರಿಗೂ ಪತ್ರ ಬರೆದು ಅವರ ಸಹಭಾಗಿತ್ವ ಪಡೆಯಬೇಕು ಎಂದರು.
ಅಕ್ಟೋಬರ್‌ನಲ್ಲಿ ಕಲಬುರಗಿ ವಿಭಾಗದಲ್ಲಿ ಶಿಕ್ಷಣ ಇಲಾಖೆಯ ಅ ಧಿಕಾರಿಗಳು ಮತ್ತು ಜಿಪಂ ಸಿಇಒಗಳ ಸಭೆ ನಡೆಸಲಾಗಿದೆ. ಎಲ್ಲ ಜಿಲ್ಲೆಗಳ ಡಿಡಿಪಿಐ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ, ಮಕ್ಕಳೊಂದಿಗೆ ನೇರಫೋನ್ ಇನ್ ಕಾರ್ಯಕ್ರಮ, ಪಾವಗಡ ತಾಲೂಕಿನ ಅಚ್ಚಮ್ಮನಹಳ್ಳಿ, ಚಾಮರಾಜನಗರ ಜಿಲ್ಲೆಯ ಗೋಪಿನಾಥಂನಲ್ಲಿ ಶಾಲಾವಾಸ್ತವ್ಯ ಮಾಡಿದ್ದೇನೆ. ಇದುವರೆಗೂ 15 ಜಿಲ್ಲೆಗಳಿಗೆ ಭೇಟಿ ನೀಡಿ ಶಿಕ್ಷಣ ಇಲಾಖೆ ವಾಸ್ತವ ಅಧ್ಯಯನ ಮಾಡಿದ್ದೇನೆ ಎಂದು ಹೇಳಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಆದ್ಯತೆಯಡಿ ಬಜೆಟ್ ಒದಗಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸರ್ಕಾರಿ ಶಾಲೆಗಳಲ್ಲಿ 1.5 ಲಕ್ಷ ವಿದ್ಯಾರ್ಥಿಗಳ ಕೊರತೆಯಾಗಿರುವುದು ಆತಂಕದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಪ್ರತಿ ವಿದ್ಯಾರ್ಥಿಗೆ ತಲಾ ಸುಮಾರು 65 ಸಾವಿರ ರೂ. ಖರ್ಚು ಮಾಡುತ್ತಿದೆ. ಆದರೂ ಕೂಡ ಅಲ್ಲಿನ ಶಿಕ್ಷಣದ ಗುಣಮಟ್ಟ ಹೆಚ್ಚಾಗದಿರುವ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದರು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸತತವಾಗಿ ಉತ್ತಮ ಸಾಧನೆ ತೋರುತ್ತಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಬೆಟಗೇರಿಯ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಮೇಶ ಅಳಗುಂಡಿ ಮಾತನಾಡಿ, ತಮ್ಮ ಶಾಲೆಯಲ್ಲಿ ಅನುಸರಿಸುತ್ತಿರುವ ಕ್ರಮಗಳನ್ನು ವಿವರಿಸಿದರು. ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ, ನಿರ್ದೇಶಕ ಡಾ| ಬಿ.ಕೆ.ಎಸ್. ವರ್ಧನ್, ಸಿಸ್ಲೆಪ್ ನಿರ್ದೇಶಕ ಬಿ.ಎಸ್. ರಘುವೀರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ| ಕೆ.ಬಿ. ಗುಡಸಿ ಇದ್ದರು.
ಸಚಿವ ಸುರೇಶಕುಮಾರ್ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿ ವಿಭಾಗದ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ, ಬಿಇಒ, ಡಯಟ್ ಅಧಿಕಾರಿಗಳು ಇದ್ದರು.