ದಾವಣಗೆರೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಕರೆ ನೀಡಿದರು.
ನಗರದ ಸರ್ಕಾರಿ ನೌಕರರಸಮುದಾಯ ಭವನದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶ ಪ್ರಗತಿಯತ್ತ ಸಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಅರಿವು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಣ ಹಾಗೂ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರಮುಖ್ಯವಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಹಿಂದೆ ಗುರು, ಮುಂದೆ ಗುರಿ ಇರಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಒಬ್ಬ ವ್ಯಕ್ತಿಯ ಜೀವನದಲ್ಲಿ ತಂದೆ, ತಾಯಿ ಹಾಗೂ ಗುರುಗಳು ಬಹಳ ಮುಖ್ಯ. ರಾಧಾಕೃಷ್ಣನ್ ಅವರು ಒಬ್ಬ ಶಿಕ್ಷಕರಾಗಿ, ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಹಲವಾರು ಹುದ್ದೆ ಅಲಂಕರಿಸುವ ಮೂಲಕ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ ಎಂದು ಸ್ಮರಿಸಿದರು. ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಶಿಲ್ಪಿ ಹೇಗೆ ಕಲ್ಲನ್ನು ಕೆತ್ತಿ ಕೆತ್ತಿ ವಿಗ್ರಹ ಮಾಡುತ್ತಾನೋ ಅದೇ ರೀತಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.
ಮಾಯಕೊಂಡ ಶಾಸಕ ಪ್ರೊ| ಲಿಂಗಣ್ಣ ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಶ್ರೇಷ್ಠವಾದ ವೃತ್ತಿ. ಸಮಾಜದಲ್ಲಿ ಬದಲಾವಣೆ ಆಗಬೇಕಾದರೆ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ. ಯಾವುದೇ ಭೇದವಿಲ್ಲದೆ, ರಾಜಕೀಯ ಒತ್ತಡಕ್ಕೆಮಣಿಯದೆ ಎಲ್ಲ ವಿದ್ಯಾರ್ಥಿಗಳನ್ನು ತಿದ್ದುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 23 ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೋವಿಡ್ ಕಾರಣದಿಂದಾಗಿ ಆಮಂತ್ರಿತ ಶಿಕ್ಷಕರ ಸಮ್ಮುಖದಲ್ಲಿ ಸಮಾರಂಭ ಸರಳವಾಗಿ ನಡೆಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ತಾಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೀವ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ದಾವಣಗೆರೆ ತಾಲೂಕು ತಹಶೀಲ್ದಾರ್ ಗಿರೀಶ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.