Advertisement

ಶಿಕ್ಷಕರ ಮಧ್ಯಂತರ ರಜೆ ರದ್ದುಗೊಳಿಸಿದ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

03:11 PM Oct 11, 2020 | keerthan |

ಬೆಂಗಳೂರು: ಶಿಕ್ಷಕರ ಮಧ್ಯಂತರ ರಜೆಯನ್ನು ರದ್ದುಗೊಳಿಸಿದ ಸರ್ಕಾರದ ನಡೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದಿದ್ದಾರೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಕೋವಿಡ್ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ ಎಂದು ಎಚ್ ಡಿಕೆ ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಎಲ್ಲರಿಗೂ ಮತದಾನದ ಹಕ್ಕು ಇರಬಾರದು! ಸರ್ವಾಧಿಕಾರಿ ಆಡಳಿತವಿರಬೇಕು: ವಿಜಯ್ ದೇವರಕೊಂಡ

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next