Advertisement

ಕಾಡಿನಲ್ಲಿ ಸುಟ್ಟ ಕಾರು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ,ಮಕ್ಕಳು ಸೇರಿ ಐವರ ಬಂಧನ

01:54 PM Oct 01, 2021 | Team Udayavani |

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪ್ರಕರಣ ಈಗ ರೋಚಕ ತಿರುವು ಪಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45 ವ) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಕೊಲೆಗೈದು ಕಾರಿನಲ್ಲಿ ಕಾಡಿಗೆ ತಂದು ಕಾರಿಗೆ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹೆಂಡತಿ, ಮಕ್ಕಳು, ತಮ್ಮನೇ ಕೊಲೆಗಾರರು: ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್ ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದು ಬಂದಿದೆ.

ಏನು ಕಾರಣ: ಕೌಟುಂಬಿಕ ಕಲಹದ ಹಿನ್ನೆಲೆ ವಿನೋದ್ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಇದೇ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

Advertisement

ಸೆ. 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆ. 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು.  ಸೆ.26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ರಾಡ್ ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ.  ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ. ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು, ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿದ್ದರು. ಮನೆಯಲ್ಲೇ ಮೊಬೈಲ್ ಗಳನ್ನು ಇಟ್ಟು ಹೋಗಿದ್ದರು.

ಇದನ್ನೂ ಓದಿ:ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ|ಬಾಯ್‍ಫ್ರೆಂಡ್ ವಿವೇಕ್ ವಿರುದ್ಧ ದೂರು ದಾಖಲು

ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿದ್ದಾರೆ. ಮೊದಲೆ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ.  ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು.

ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಕೊಲೆ ಮಾಡಿದ್ದ ಜಾಗವನ್ನು ಫಿನಾಯಲ್ ಬಳಸಿ ಸ್ವಚ್ಛಗೊಳಿಸಿದ್ದರು. ಅಷ್ಟೇ ಅಲ್ಲದೆ, ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು.

ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. ಪೊಲೀಸರು ಐವರನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next