ಜಮ್ಮು-ಕಾಶ್ಮೀರ:ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನ ಬಾಕಿ ಇರುವಾಗಲೇ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಿರುವ ಘಟನೆ ಗುರುವಾರ (ಆಗಸ್ಟ್ 13, 2020) ನಡೆದಿದೆ.
ಆವಂತಿಪೋರಾ ಗ್ರಾಮದ ಬಾರ್ಸೋದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿತ್ತು. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಪರಾರಿಯಾಗಿದ್ದು, ಅಡಗುತಾಣ ಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.
ಶೋಧ ಕಾರ್ಯಾಚರಣೆಯಲ್ಲಿ ಎಕೆ 47 ಗನ್ ನ ರೌಂಡ್ಸ್ ಗಳು, ಗ್ರೆನೇಡ್ಸ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿ ವಿವರಿಸಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಕಟ್ಟುನಿಟ್ಟಾಗಿ ಭದ್ರತೆಯನ್ನು ಪರಿಶೀಲಿಸಲಾಗುತ್ತಿದ್ದು, ಪ್ರತಿಯೊಂದು ಚಟುವಟಿಕೆ ಮೇಲೆ ನಿಗಾ ಇಡಲಾಗಿದೆ ಎಂದು ವರದಿ ವಿವರಿಸಿದೆ.