ಬೆಂಗಳೂರು: ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ (ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್) ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.
ಸಚಿವರಾಗಿ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳ ವಿವರದ ಪಟ್ಟಿ ಪ್ರಕಟಿಸಿರುವ ಅವರು ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸುವ ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ.
ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ- ಜೆಡಿಯು ಜಗಳ: ಸೋನಿಯಾಗೆ ಕರೆ ಮಾಡಿದ ನಿತೀಶ್ ಕುಮಾರ್
ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿಗಳನ್ನು ಆರಂಭಿಸುವ ಉದ್ದೇಶವಿದ್ದು, ಮುಂದಿನ ದಿನಗಳಲ್ಲಿ ಮಾದರಿ ಶಾಲೆಗಳಲ್ಲಿ ಹಾಗೂ ಹೊಸ ನೇಮಕಾತಿಯಿಂದ ಲಭ್ಯವಾಗುವ ಇಂಗ್ಲೀಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಹಂತ ಹಂತವಾಗಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶಾಲೆಗಳಲ್ಲಿ ನೈತಿಕ ವಿಜ್ಞಾನ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದೂ ಹೇಳಿದ್ದಾರೆ.