ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಗೊಂದಲದ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಸೋಮವಾರ ಆರ್ ಎಸ್ಎಸ್ ಪ್ರಮುಖರ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ನಾಗೇಶ್ ಇಂದು ಆರ್.ಟಿ.ನಗರದ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದರು.
ಆ ಸಭೆ ಹಾಗೂ ಆರ್ ಎಸ್ಎಸ್ ನವರ ಸಂದೇಶದ ಬಗ್ಗೆ ಸಿಎಂ ಗೆ ನಾಗೇಶ್ ಮಾಹಿತಿ ನೀಡಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ಸರಿಪಡಿಸುವ ಸಂಬಂಧವೂ ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ.
ಜನರ ಅವಗಾಹನೆಗೆ ಪಠ್ಯ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಾಹಿತ್ಯಿಕ ಮತ್ತು ರಾಜಕೀಯವಾಗಿ ತೀವ್ರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗಳು “ಯಾವ ಪಠ್ಯವನ್ನು ತೆಗೆದು ಯಾವುದನ್ನು ಸೇರ್ಪಡೆ ಮಾಡಿದ್ದರು’ ಎಂಬ ವಿವರಗಳನ್ನು ಸಾರ್ವಜನಿಕರಿಗೆ ಮಾಹಿತಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಇದನ್ನೂ ಓದಿ:ಮಂಕಿಪಾಕ್ಸ್ ಸೋಂಕು ಭೀತಿ: ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲು ಸರ್ಕಾರದ ಸೂಚನೆ
ಈ ಮಾಹಿತಿಯನ್ನು ಸದ್ಯದಲ್ಲಿಯೇ ಶಿಕ್ಷಣ ಇಲಾಖೆಯು ಕರ್ನಾಟಕ ಪಠ್ಯಪುಸ್ತಕ ಸಂಘದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಿದೆ. ಬಳಿಕ ಎರಡೂ ವಿಚಾರವಾಗಿ ಸಾರ್ವಜನಿಕರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗುತ್ತದೆ. ಬಳಿಕ ಅಗತ್ಯಬಿದ್ದರೆ ಚರ್ಚಿಸಿ ಯಾವ ವಿಷಯಗಳನ್ನು ಸೇರ್ಪಡೆ ಮಾಡಬೇಕು ಮತ್ತು ಬಿಡಬೇಕು ಎಂಬ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದರು