Advertisement

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

12:34 AM Oct 22, 2020 | mahesh |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್‌ಡೌನ್‌ ಸಂದರ್ಭ ಪೊಲೀಸರ ಸೇವೆ ಶ್ಲಾಘನೀಯವಾಗಿದೆ. ಕಂಟೋನ್ಮೆಂಟ್‌ ವಲಯಗಳಲ್ಲಿ ರಾಜ್ಯ ಪೊಲೀಸರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುವಲ್ಲಿ ಯಶಸ್ವಿ ಯಾಗಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

Advertisement

ಪೊಲೀಸ್‌ ಸಂಸ್ಮರಣೆ ದಿನಾಚರಣೆ ಅಂಗವಾಗಿ ಬುಧವಾರ ಮೈಸೂರು ರಸ್ತೆಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಹುತಾತ್ಮರ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು. ಲಾಕ್‌ಡೌನ್‌ ಸಂದರ್ಭದಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಬೆಂಗಳೂರಿನಲ್ಲಿ 345 ಸಹಿತ ರಾಜ್ಯಾದ್ಯಂತ 580 ಚೆಕ್‌ಪೋಸ್ಟ್‌ ನಿರ್ಮಿಸಿ ಕೋವಿಡ್‌-19 ವಿರುದ್ಧ ಕೆಲಸ ಮಾಡಿದ್ದಾರೆ. ಇದರೊಂದಿಗೆ ಕಾನೂನು ಸುವ್ಯವಸ್ಥೆ ಮತ್ತು ಉತ್ತಮ ಸಮಾಜ ಸ್ಥಾಪಿಸುವಲ್ಲಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಕ್ವಾರಂಟೈನ್‌, ಸೋಂಕಿತರ ಪ್ರೈಮರಿ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ, ವೈದ್ಯರು, ಅರೆ ವೈದ್ಯರು, ಆಶಾ ಕಾರ್ಯಕರ್ತೆಯರ ರಕ್ಷಣೆ, ಕೊರೊನಾ ವಾರಿಯರ್ಸ್‌ಗಳಿಗೆ ಪೊಲೀಸರು ಭದ್ರತೆ ನೀಡಿದ್ದಾರೆ ಎಂದು ಅವರು ಹೇಳಿದರು. ಜತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್‌ ಮಾಫಿಯಾ, ಆರ್ಥಿಕ ಹಾಗೂ ಸೈಬರ್‌ ಅಪರಾಧಗಳನ್ನು ಹತ್ತಿಕ್ಕಲು ಪೊಲೀಸರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗು ವುದು ಎಂದು ಹೇಳಿದರು.

ಕೊರೊನಾ ಸಂದರ್ಭ ಜನರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಿದ ಸಿಬಂದಿಯಲ್ಲಿ 8,900 ಮಂದಿ ಹಾಗೂ ಅವರ ಕುಟುಂಬದ 500 ಮಂದಿ ಸೋಂಕಿತರಾಗಿದ್ದಾರೆ. ಸುಮಾರು 85 ಮಂದಿ ಅಧಿಕಾರಿ,ಸಿಬಂದಿ ಮೃತಪಟ್ಟಿದ್ದಾರೆ ಎಂದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ಸರಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್‌, ಗೃಹ ಇಲಾಖೆ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಎ.ಎಂ.ಪ್ರಸಾದ್‌ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗೆ ಸಿಎಂ ನಕಾರ
ಮುಖ್ಯಮಂತ್ರಿ ಬದಲಾವಣೆ ಕುರಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ಸರಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಅಧಿಕಾರಿಗಳ ಜತೆ ನಷ್ಟದ ಕುರಿತು ಮಾಹಿತಿ ಪಡೆಯಲಾಗಿದೆ. ಸಂತ್ರಸ್ತರಿಗೆ ತೊಂದರೆಯಾಗದ ರೀತಿಯಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next