Advertisement

ಅವಿಶ್ವಾಸ ಮಂಡನೆ ಪ್ರಶ್ನಿಸಿದ್ದ ಮೇಲ್ಮನವಿ ವಜಾ

08:16 AM Oct 13, 2018 | |

ಬೆಂಗಳೂರು: ರಾಜ್ಯದ ಸುಮಾರು 60ಕ್ಕೂ ಅಧಿಕ ಗ್ರಾಮ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳನ್ನು ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ
ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದ ಮುಖ್ಯ ನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಎಸ್‌.ಜಿ ಪಂಡಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿ ಈ ಆದೇಶ ನೀಡಿತು.

Advertisement

ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಕೋರಿ ನೆಲಮಂಗಲ ತಾಲೂಕಿನ ಬಸವನಹಳ್ಳಿಯ ಅಧ್ಯಕ್ಷರಾಗಿದ್ದ ಮಂಜುಳಾ ಮತ್ತು ಉಪಾಧ್ಯಕ್ಷರಾಗಿದ್ದ ನರಸಿಂಹಮೂರ್ತಿ ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯ್ದೆ-1993 ಸೆಕ್ಷನ್‌ 49(1)ರ ಪ್ರಕಾರ ಗ್ರಾಪಂ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಆಯ್ಕೆಗೊಂಡ 30 ತಿಂಗಳ ನಂತರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರಪಯೋಗದಂತಹ ಗಂಭೀರ ಹಾಗೂ ನಿರ್ದಿಷ್ಟ ಆರೋಪ ಕೇಳಿಬಂದಾಗ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬಹುದು. ಹಾಗೆಯೇ, ಸೆಕ್ಷನ್‌ 49(2)ರ ಪ್ರಕಾರ 30ತಿಂಗಳ ಮುನ್ನವೇ ಆರೋಪ ಕೇಳಿಬಂದರೂ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂಬ ನಿಯಮವನ್ನು ಎತ್ತಿಹಿಡಿದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶವು ಸೂಕ್ತವಾಗಿದೆ ಎಂದು ವಿಭಾಗೀಯ ಪೀಠ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

ಇದೇ ವೇಳೆ ಸೆಕ್ಷನ್‌ 49(2)ರನ್ವಯ ಅವಿಶ್ವಾಸ ನಿರ್ಣಯ ಪ್ರಕ್ರಿಯೆ ಕುರಿತು ಅತೃಪ್ತಿ ವ್ಯಕ್ತಪಡಿಸಿರುವ ನ್ಯಾಯಪೀಠ, ಅವಿಶ್ವಾಸ ನಿರ್ಣಯವನ್ನು ಉಪವಿಭಾಗಾಧಿಕಾರಿಗೆ ಕಳುಹಿಸಿಕೊಡಬೇಕು. ಅವರು ಅದನ್ನು ಕಾರ್ಯನಿರ್ವಾಹಕ ಅಧಿಕಾರಿಗೆ ಕಳುಹಿಸಿ, ಆರೋಪಗಳ ಕುರಿತು ವರದಿ ಪಡೆಯಬೇಕು. ವರದಿಯಲ್ಲಿ ಆರೋಪಗಳನ್ನು ಸಾಬೀತಾದರೆ ಆರೋಪಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಹುದ್ದೆಯಿಂದ ಕೆಳಗಿಳಿಸಬಹುದಾಗಿದೆ. ಆದರೆ,  ಪ್ರಕ್ರಿಯೆ ಸಾಕಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. ಅಲ್ಲದೆ, ಕಾರ್ಯನಿರ್ವಾಹಕ ಅಧಿಕಾರಿಯ ವರದಿ ಆಧರಿಸಿ ಆರೋಪಿತರ ವಿರುದ್ಧ ಕ್ರಮ ಜರುಗಿಸುವ ಮುನ್ನ, ಆ ಕುರಿತು ಪಂಚಾಯಿತಿಯಲ್ಲಿ ಮತ್ತೂಮ್ಮೆ ಚರ್ಚೆಗೆ ಅವಕಾಶ ಕಲ್ಪಿಸುವುದು ನ್ಯಾಯಸಮ್ಮತ ಎಂದು ವಿಭಾಗೀಯ ಪೀಠ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?
ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಅದಕ್ಕೆ ಸಂಬಂಧಿಸಿದ ನೋಟಿಸ್‌ ಪ್ರಶ್ನಿಸಿ ರಾಜ್ಯದ 60ಕ್ಕೂ ಹೆಚ್ಚು ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆರೋಪಗಳ ಕುರಿತಂತೆ ಸತ್ಯಾಸತ್ಯತೆ ಪರಿಶೀಲಿಸದೆ ಹಾಗೂ ತನಿಖೆ ನಡೆಸದೆ
ಅವಿಶ್ವಾಸ ನಿರ್ಣಯ ಮಂಡನೆಯ ನೋಟಿಸ್‌ ಜಾರಿಗೊಳಿಸಲಾಗಿದೆ. ಇದು ಸಂವಿಧಾನ ಬಾಹಿರ ಎಂದು ವಾದಿಸಿದ್ದರು. 2018ರ ಫೆ.28ರಂದು ಹೈಕೋರ್ಟ್‌ ಏಕಸದಸ್ಯ ಪೀಠ ಅರ್ಜಿಗಳನ್ನು ವಜಾಗೊಳಿಸಿತ್ತು. ಇದನ್ನು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ವಿಭಾಗೀಯ ಪೀಠವು ಮೇಲ್ಮನವಿದಾರರ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next