ಬಾಗಲಕೋಟೆ: “ಏನೇ ತಿಪ್ಪರಲಾಗ ಹಾಕಿದರೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ.ಮುಂದೆಯೂ ನಮ್ಮನ್ನೇ ಆಯ್ಕೆ ಮಾಡುತ್ತಾರೆ. ಹೀಗಾಗಿ, ಸ್ಪಷ್ಟ ಬಹುಮತದೊಂದಿಗೆ ಮತ್ತೂಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಿರ್ಣಾಯಕ ಪಾತ್ರ ಅಂದ್ರೆ ಏನು? ಅವರು ಯಾವ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿಗೆ ಭ್ರಮೆಯಾಗಿದೆ ಎಂದು ಟೀಕಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ವಿಷಯ ತಿಳಿಸಲಾಗಿದೆ. ಸಂಪುಟ ವಿಸ್ತರಣೆ ಕೂಡ ಆಗಲಿದೆ. ಆದರೆ, ಯಾರ್ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ.
– ಸಿದ್ದರಾಮಯ್ಯ, ಮುಖ್ಯಮಂತ್ರಿ