ಹಾಸನ: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಳಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಜೆಡಿಎಸ್ ಅಭ್ಯರ್ಥಿಗಳು ಸೋಲು ಅನುಭವಿಸುವಂತಾಯಿತು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ದೂರಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಜೆಡಿಎಸ್ ಮುಗಿಸಲೇಬೇಕು. ಪ್ರಾದೇಶಿಕ, ರೈತರ ಪರ, ಜಾತ್ಯತೀತ ನಿಲುವಿನ ಪ್ರಾದೇಶಿಕ ಪಕ್ಷ ಇರಲೇಬಾರದು ಎಂಬುದು ಗುರಿಯಾಗಿತ್ತು.
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಸಮುದಾಯದವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಆದರೆ, ಇಂತಹ ಕುತಂತ್ರದ ರಾಜಕಾರಣವನ್ನು ಮೆಟ್ಟಿ ನಿಲ್ಲುವ ಶಕ್ತಿ ಜೆಡಿಎಸ್‌ಗಿದೆ.
ಕೆ.ಆರ್.ಪೇಟೆಯಲ್ಲಿ ಉಪ ಮುಖ್ಯಮಂತ್ರಿಯೇ ಖುದ್ದು ಹಾಜರಿದ್ದು, ಹಣ ಹಂಚಿಸಿದ್ದಾರೆ. ಪೊಲೀಸ್ ವಾಹನದಲ್ಲಿಯೇ ಹಣ ರವಾನೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.
2023ರ ವಿಧಾನಸಭಾ ಚುನಾವಣೆಯ ವೇಳೆಗೆ ಜೆಡಿಎಸ್ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಪಕ್ಷ ಸಂಘಟಿಸಲು ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ಮುಖಂಡರು ಮಂಗಳವಾರ ಚರ್ಚೆ ನಡೆಸಿದ್ದಾರೆ. ಆ ವೇಳೆಗೆ ಈ ಎರಡೂ ರಾಷ್ಟ್ರೀಯ ಪಕ್ಷಗಳೂ ಬೇಡ ಎಂಬ ಮನಸ್ಥಿತಿಗೆ ರಾಜ್ಯದ ಮತದಾರರೇ ಬರಲಿದ್ದಾರೆ ಎಂದು ರೇವಣ್ಣ ಹೇಳಿದರು.