ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “ಸ್ಮಾರ್ಟ್‌ಸಿಟಿ’ ಯೋಜನೆಗೆ ಬಿಡುಗಡೆ ಮಾಡಿರುವ ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ಬುಧವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಹಾಗೂ ಸಹ ವಕ್ತಾರ ಎ.ಎಚ್.ಆನಂದ್, ಸ್ಮಾರ್ಟ್‌ಸಿಟಿ ಯೋಜನೆಗಾಗಿ ಕೇಂದ್ರ ಸರ್ಕಾರವು 886 ಕೋಟಿ ರೂ. ಬಿಡುಗಡೆ ಮಾಡಿದ್ದರೂ ಕೇವಲ 86.02 ಕೋಟಿ ರೂ. ಮಾತ್ರ ವೆಚ್ಚ ಮಾಡಿರುವುದು ಸರ್ಕಾರದ ನಿರ್ಲಕ್ಷ್ಯ ತೋರಿಸುತ್ತದೆ. ರಾಜ್ಯದ ಏಳು ಮಹಾನಗರಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿದ್ದರೂ ಬಳಸಿಕೊಳ್ಳದಿರಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಆರೋಪಿಸಿದ್ದರು. ಇದೀಗ ರಾಜ್ಯ ಸರ್ಕಾರವು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿದ್ದ ಹಣಕಾಸು ವಿನಿಮಯ ಪತ್ರದಲ್ಲಿ ಕೇವಲ 86.02 ಕೋಟಿ ರೂ. ಅನುದಾನ ಬಳಸಿರುವುದು ಬಹಿರಂಗವಾಗಿದೆ. ಇದಕ್ಕೆ ಯಾರು ಹೊಣೆ ಎಂದು ಟೀಕಿಸಿದರು.
ಸ್ಮಾರ್ಟ್‌ಸಿಟಿ ಯೋಜನೆಯಡಿ ಪ್ರತಿ ನಗರಕ್ಕೆ ಆಧುನಿಕ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ 500 ಕೋಟಿ ರೂ. ಆರ್ಥಿಕ ನೆರವು ನೀಡುತ್ತಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರೆ ರಾಜ್ಯದ ಜನರಿಗೆ ಅನುಕೂಲವಾಗುತ್ತಿತ್ತು. ಬಿಡುಗಡೆಯಾದ ಅನುದಾನದಲ್ಲಿ ಶೇ.9.70ರಷ್ಟು ಹಣವಷ್ಟೇ ಬಳಕೆಯಾಗಿದೆ. ಅದರಲ್ಲಿ 38.47 ಕೋಟಿ ರೂ. ಕಚೇರಿ ಹಾಗೂ ಆಡಳಿತಾತ್ಮಕ ವೆಚ್ಚಕ್ಕೆ ಬಳಕೆಯಾಗಿದೆ. ಇದರಿಂದ ಜನಪ್ರತಿನಿಧಿಗಳು ಎಷ್ಟರ ಮಟ್ಟಿಗೆ ಯೋಜನೆ ಜಾರಿಗೆ ಆಸಕ್ತಿ ತೋರಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ವಾಗ್ಧಾಳಿ ನಡೆಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರ ತಾರತಮ್ಯ ಮಾಡದೆ ಯೋಜನೆಗಳಿಗೆ ಆರ್ಥಿಕ ನೆರವು ನೀಡುತ್ತಾ ಬಂದಿದೆ. ಆದರೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಯೋಜನೆ ಅನುಷ್ಠಾನಗೊಂಡರೆ ಕೇಂದ್ರ ಸರ್ಕಾರ ಹಿರಿಮೆಗೆ ಪಾತ್ರವಾಗಲಿದೆ ಎಂಬ ಕಾರಣಕ್ಕೆ ಕೈಬಿಟ್ಟಿರಬಹುದು ಎಂದು ಶಂಕಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಈಗಲಾದರೂ ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅನ್ಯ ರಾಜ್ಯಗಳು ಕೇಂದ್ರದ ಅನುದಾನವನ್ನು ಯಾವ ರೀತಿಯಲ್ಲಿ ಬಳಸುತ್ತಿವೆ ಎಂಬುದನ್ನು ನೋಡಿ ರಾಜ್ಯ ಸರ್ಕಾರ ಕಲಿಯಬೇಕು ಎಂದು ಹೇಳಿದರು.
ತಮಿಳುನಾಡು ವಿರೋಧ ವ್ಯಕ್ತಪಡಿಸಿದರೂ ಅದನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಗೂ ಹಸಿರು ನಿಶಾನೆ ತೋರಿದೆ. ರಾಜ್ಯಕ್ಕೆ ಕೇಂದ್ರದ ಯಾವುದೇ ಯೋಜನೆಗೆ ಎನ್‌ಡಿಎ ಸರ್ಕಾರ ವಿರೋಧ ವ್ಯಕ್ತಪಡಿಸಿಲ್ಲ. ವಸ್ತುಸ್ಥಿತಿ ಹೀಗಿರುವಾಗ ಅನುದಾನದ ಸದುಪಯೋಗ ಅವಶ್ಯ ಎಂದು ಹೇಳಿದರು.