ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಮುಹಮ್ಮದ್ ಜುಬೈರ್ ಹತ್ಯೆ ಖಂಡಿಸಿ ಮತ್ತು ಕರಾವಳಿ ಸೇರಿದಂತೆ ಕರ್ನಾಟಕವನ್ನು ಗಾಂಜಾ, ಮಾದಕ ದ್ರವ್ಯದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮತ್ತು ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಂಜಾ ಮತ್ತು ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಲ್ಲದೆ, ಉಳ್ಳಾಲದ ಜುಬೈರ್ ಹತ್ಯೆಗೆ ನೈತಿಕ ಹೊಣೆ ಹೊತ್ತು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಯು.ಟಿ.ಖಾದರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಆರ್.ಅಶೋಕ್, ಕರ್ನಾಟಕದಲ್ಲಿ ಹಿಂದೂಗಳ-ಅಲ್ಪಸಂಖ್ಯಾತರ ಸರಣಿ ಕೊಲೆಗಳು ನಡೆಯುತ್ತಿದೆ. ಆದರೆ, ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಅಬ್ದುಲ್ ಅಜೀಂ ಮಾತನಾಡಿ, ದಕ್ಷಿಣ ಕನ್ನಡ ಜಿಯಲ್ಲಿ ಬಿಜೆಪಿ ಕಾರ್ಯಕರ್ತರ ಸರಣಿ ಕೊಲೆಗಳು ನಡೆಯುತ್ತಿವೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಉಳ್ಳಾಲದ ಜುಬೈರ್ ಕೊಲೆ ಹಿಂದೆ ಮಾದಕವಸ್ತುಗಳ ಮಾಫಿಯಾದ ಕೈವಾಡವಿದ್ದು, ಇದರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮೀ ಡಿ’ಸೋಜ, ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಮುಖಂಡರಾದ ಅಬೂಬಕ್ಕರ, ಹುಮಾಯೂನ್ ಮತ್ತಿತರರು ಇದ್ದರು.