ಬೆಂಗಳೂರು: ಸುರಿಯುತ್ತಿದ್ದ ಮಳೆಯ ಮಧ್ಯೆಯೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಮುಂದುವರಿಯಿತು.
ಪಾದಯಾತ್ರೆಯ 13ನೇ ದಿನವಾದ ಗುರುವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ನೂರಾರು ಕಾರ್ಯಕರ್ತರೊಂದಿಗೆ ಕೊಡೆ ಹಿಡಿದು ಮಳೆಯ ಮಧ್ಯೆಯೇ ಶಂಕರಮಠದ ವಿವೇಕಾನಂದ ಆಟದ ಮೈದಾನದಿಂದ ಪಾದಯಾತ್ರೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಆಡಳಿತ ನೀಡುತ್ತಿರುವುದು ಮಾತ್ರವಲ್ಲದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ವಿಫಲವಾಗಿದೆ.
ಪ್ರತಿಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಾ ಕಾಲ ಕಳೆಯುತ್ತಿದೆಯೇ ಹೊರತು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು. ಇಂತಹ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆಗೆ ಜನರ ಆಶೀರ್ವಾದ ಮಾತ್ರವಲ್ಲ, ವರುಣದೇವ ಕೂಡ ಮಾರುವೇಷದಲ್ಲಿ ಬಂದು ಆಶೀರ್ವಾದ ಮಾಡಿದ್ದಾನೆ.
ಈ ಮಳೆಯ ನಡುವೆಯೂ ನೂರಾರು ಕಾರ್ಯಕರ್ತರು ಪಾದಯಾತ್ರೆ ನಡೆಸುತ್ತಿರುವುದು ರಾಜ್ಯ ಸರ್ಕಾರದ ಜನವಿರೋಧಿ ಆಡಳಿತದ ಬಗ್ಗೆ ಬೆಂಗಳೂರಿನವರಿಗಿರುವ ಆಕ್ರೋಶವನ್ನು ತೋರಿಸುತ್ತದೆ ಎಂದರು. ಕುರುಬರಹಳ್ಳಿ ವೃತ್ತದವರೆಗೆ ನಡೆದ ಪಾದಯಾತ್ರೆಯಲ್ಲಿ ಮಾಜಿ ಉಪಮೇಯರ್ ಎಸ್.ಹರೀಶ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.