ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ರಾಜ್ಯ ಬಜೆಟ್ ಅಧಿವೇಶನದ ಬಳಿಕ ಸಮೀಕ್ಷಾ ವರದಿ ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಗೃಹಕಚೇರಿ “ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆ ಬಳಿಕ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕೈಬಿಡುವ ಪ್ರಶ್ನೆಯೇ ಇಲ್ಲ. ಸಭೆಯಲ್ಲೂ ದಲಿತ ಮುಖಂಡರು ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಬಜೆಟ್ ಬಳಿಕ ಸಮೀಕ್ಷಾ ವರದಿ ಬಗ್ಗೆ ಗಮನ ಹರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.
ಬಡ್ತಿ ಮೀಸಲಾತಿ ರದ್ದುಪಡಿಸಿಪಡಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು. ಈವರೆಗೆ ಜಿಲ್ಲಾಧಿಕಾರಿಯಾಗಿದ್ದವರು ಮತ್ತೆ ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡಲು ಸಾಧ್ಯವೇ? ಸುಪ್ರೀಂ ಆದೇಶವನ್ನು ಮೇಲ್ಮನವಿ ಮೂಲಕ ಪ್ರಶ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣ ಮತ್ತು ತರಬೇತಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಘೋಷಿಸಬೇಕು. ಹಾಗೆಯೇ ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು.
ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ಹಾಗೂ ವಿಶ್ವಕರ್ಮ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಆಂಜನೇಯ ಹೇಳಿದರು.