ನವದೆಹಲಿ: ರಾಜ್ಯಕ್ಕೆ ಪ್ರತಿದಿನ ಐದು ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಿತ್ಯ 3.5ರಿಂದ 4 ಲಕ್ಷ ಲಸಿಕೆ ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಸೆಪ್ಟೆಂಬರ್‌ನಿಂದ ಪ್ರತಿದಿನ ಐದು ಲಕ್ಷ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಸಂಗತಿಯನ್ನು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಯಿತು. ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪೂರೈಸುವ ಭರವಸೆ ನೀಡಿರುವುದಾಗಿ ಹೇಳಿದರು.
ಇದನ್ನೂ ಓದಿ:ಗಂಟೆಗೆ 1,078 ಕಿ.ಮೀ. ವೇಗದಲ್ಲಿ ಸಾಗುವ ಹೈಪರ್‌ಲೂಪ್
ಇದಕ್ಕೂ ಮುನ್ನ ಕೇಂದ್ರ ಜವಳಿ ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೊಸ ಜವಳಿ ನೀತಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು.
ಅದೇ ರೀತಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಲಾಗಿದೆ. ದೇಶದಲ್ಲಿಯೇ ಮೊಟ್ಟಮೊದಲ ರಾಜ್ಯವಾಗಿ ಕರ್ನಾಟಕ ಅನುಷ್ಠಾನಕ್ಕೆ ತಂದಿದೆ ಎಂದು ಅವರು ಹೇಳಿದರು.