Advertisement

ಕೇಂದ್ರ ಸರ್ಕಾರದಿಂದ ಇನ್ನೂ ಬರ ಪರಿಹಾರ ಬಂದಿಲ್ಲ

03:45 AM Jan 12, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳಿಗೆ 1,782 ಕೋಟಿ ರೂ. ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆಯೇ ಹೊರತು ಇದುವರೆಗೂ ರಾಜ್ಯಕ್ಕೆ ಹಣ ಬಂದಿಲ್ಲ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

Advertisement

ಮಾಜಿ ಪ್ರಧಾನಿ ಲಾಲ್‌ ಬಹಾದ್ದೂರ್‌ ಶಾಸಿŒ ಅವರ ಪುಣ್ಯತಿಥಿ ಅಂಗವಾಗಿ ಬುಧವಾರ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬರ ಪರಿಹಾರ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಮತ್ತೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾಗಿದ್ದರಿಂದ 139 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕಾಮಗಾರಿಗಳಿಗಾಗಿ 4702 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ 1782 ಕೋಟಿ ರೂ. ನೀಡುವುದಾಗಿ ಹೇಳಿದೆ. ಆ ಹಣವೂ ಇದುವರೆಗೆ ಬಂದಿಲ್ಲ. ಇದರೊಂದಿಗೆ ಹಿಂಗಾರು ಮಳೆಯೂ ಕೈಕೊಟ್ಟಿದ್ದರಿಂದ ಪ್ರಸ್ತುತ 160 ತಾಲೂಕುಗಳು ಬರಪೀಡಿತವಾಗಿದ್ದು, ಈಗಾಗಲೇ ಕೇಂದ್ರ ಹೇಳಿರುವ ಹಣ ಬಿಡುಗಡೆ ಜತೆಗೆ ಹೆಚ್ಚುವರಿ ಪರಿಹಾರ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕವನ್ನು ನಿರ್ಲಕ್ಷಿಸಿದೆ ಎಂದು ಮತ್ತೆ ಆರೋಪ ಮಾಡಿದ ಸಚಿವರು, ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಇಂತಹದ್ದೇ ಪರಿಸ್ಥಿತಿ ಎದುರಾದಾಗ ಕೇಂದ್ರ ಸರ್ಕಾರ 3000 ಕೋಟಿ ರೂ. ಪರಿಹಾರ ಮಂಜೂರು ಮಾಡಿತ್ತು. ಆದ್ದರಿಂದ ಕರ್ನಾಟಕಕ್ಕೂ ಅದೇ ಮಾದರಿಯಲ್ಲಿ ಕನಿಷ್ಠ 3000 ಕೋಟಿ ರೂ. ಪರಿಹಾರ ಮಂಜೂರು ಮಾಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಬಿತ್ತನೆ ಕುಂಠಿತ: 
ಮಳೆ ಕೈಕೊಟ್ಟಿದ್ದರಿಂದ ಹಿಂಗಾರು ಹಂಗಾಮಿನಲ್ಲೂ ಬಿತ್ತನೆ ತೀವ್ರ ಕುಸಿತವಾಗಿದೆ. ರಾಜ್ಯದಲ್ಲಿ ಹಿಂಗಾರು ಹಂಗಾಮಿನ ವಾಡಿಕೆ ಬಿತ್ತನೆ 33 ಲಕ್ಷ ಹೆಕ್ಟೇರ್‌ ಪ್ರದೇಶದಷ್ಟಿದ್ದರೂ ಈ ಬಾರಿ 25 ಲಕ್ಷ ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂಗಾರು ಬೆಳೆ ನಷ್ಟ ಕುರಿತಂತೆ ಜಂಟಿ ಸರ್ವೇ ಕಾರ್ಯ ನಡೆಸಿ ಜನವರಿ 20ರೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರ ನಿರ್ವಹಣೆ ಮತ್ತು ಮೇಲುಸ್ತುವಾರಿಗಾಗಿ ನಾಲ್ವರು ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಿದೆ. ಶೀಘ್ರದಲ್ಲೇ ಎಲ್ಲಾ ನಾಲ್ಕು ಸಮಿತಿಗಳು ವರದಿ ಸಲ್ಲಿಸಲಿದ್ದು, ಇದನ್ನು ಆಧರಿಸಿ ಮತ್ತೂಮ್ಮೆ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

Advertisement

ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ ಕುಂಟಿಯಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್‌ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next