Advertisement

ಕೇಂದ್ರ ಸರ್ಕಾರ ಹಿಂದೂ-ಮುಸ್ಲಿಮರನ್ನು ವಿಭಜಿಸುತ್ತಿದೆ: ಧ್ರುವ

09:47 PM Mar 03, 2020 | Lakshmi GovindaRaj |

ಚಾಮರಾಜನಗರ: ಕೇಂದ್ರದ ಬಿಜೆಪಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರನ್ನು ವಿಭಜನೆ ಮಾಡುವ ಕೇಳುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಆರ್‌.ಧ್ರುವನಾರಾಯಣ ಟೀಕಿಸಿದರು.

Advertisement

ನಗರದ ಸತ್ತಿರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಇಸ್ಲಾಹುಲ್‌ ಮುಸ್ಲಿಮೀನ್‌ ಸಂಸ್ಥೆಯು ಎನ್‌ಪಿಆರ್‌, ಸಿಎಎ, ಎನ್‌ಆರ್‌ಸಿ ವಿರೋಧಿಸಿ, ಮಾ.7ರಂದು ನಗರದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣೆ ಮತ್ತು ಪೌರತ್ವ ವಿರೋಧಿಸಿ ನಡೆಸಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದೇಶದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಉದ್ಯೋಗ ಸಮಸ್ಯೆ ನಿವಾರಿಸಿಲ್ಲ. ಬಿಜೆಪಿ ಎಲ್ಲ ರಂಗದಲ್ಲೂ ವಿಫ‌ಲವಾಗಿದೆ. ಇದನ್ನು ಮರೆಮಾಚಲು ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಜಾರಿಗೆ ಮಾಡಿದೆ. ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿ ಹೊಂದಾಣಿಕೆ ಎಲ್ಲರನ್ನೂ ಜೊತೆ ಕರೆದುಕೊಂಡು ಕೆಲಸ ಮಾಡುತ್ತಿತ್ತು.

ಮುಸ್ಲಿಮರು ಎಲ್ಲರಂಗದಲ್ಲೂ ಇದ್ದು, ದೇಶಕ್ಕೆ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ವಿಭಜನೆ ಮಾಡುತ್ತಿದ್ದಾರೆ. ಮೋದಿ ಅವರು ಪೋಲಿಸರ ಮೂಲಕ ದೆಹಲಿ ಗಲಭೆ ಆರಂಭಿಸಿದ್ದಾರೆ. ಅದನ್ನು ಪ್ರಶ್ನಿಸಿದ ನ್ಯಾಯಾಧೀಶರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು.

ಚಾಮರಾಜನಗರದಲ್ಲಿ ಮಾ.7ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌, ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದಾರೆ.

Advertisement

ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ದ ಮೈಸೂರಿನಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲೆಗೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನೇಕ ಸಲ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದಾರೆ. ಅಂದು ಮಳವಳ್ಳಿ ಮಾರ್ಗವಾಗಿ ಸತ್ತೇಗಾಲ, ಕೊಳ್ಳೇಗಾಲ ಮೂಲಕ ಚಾಮರಾಜನಗರಕ್ಕೆ ಬರಲಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿದ್ದು ಸ್ವಾಗತ ನೀಡಬೇಕು ಎಂದರು.

ಚಾಮರಾಜನಗರದಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಸಮಾವೇಶದ ನಂತರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಲ್ಲಿಕಾರ್ಜುನಖರ್ಗೆ ಅವರನ್ನು ಸನ್ಮಾನಿಸಲಾಗವುದು. ಪಕ್ಷದ ಕಾರ್ಯಕರ್ತರು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ದ ತಿಳಿಸಬೇಕು. ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಹೇಳಿದರು.

ಮಾಜಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿ ಮಾಡಿ ಉದ್ದಟತನ ತೋರುತ್ತಿದೆ. ದೆಹಲಿಯಲ್ಲಿ ಕೇಜ್ರಿವಾಲ್‌ ನೇತೃತ್ವದ ಆಮ್‌ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿರುವುದುನ್ನು ಸಹಿಸಿಕೊಳ್ಳದೇ ಪ್ರಧಾನಿ ನರೇಂದ್ರಮೋದಿ, ಅಮಿಷ್‌ಶಾ ಅವರು ದೆಹಲಿ ಗಲಭೆಗೆ ಮಾಡಿಸಿ ರಾಷ್ಟ್ರಪತಿ ಆಡಳಿತ ಹೇರುವ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಅಧ್ಯಕ್ಷತೆ ವಹಿಸಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ. ಅವರಿಗೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಗುವುದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಎಸ್‌. ಬಾಲರಾಜ್‌, ಯುವ ಮುಖಂಡ ಗಣೇಶ್‌ಪ್ರಸಾದ್‌, ಜಿ.ಪಂ.ಉಪಾಧ್ಯಕ್ಷ ಮಹೇಶ್‌, ಜಿ.ಪಂ. ಸದಸ್ಯ ಯೋಗೇಶ್‌ , ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ನಗರಸಭಾ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್‌.ಮಹದೇವು, ಚಿಕ್ಕಮಹದೇವು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಗುರುಸ್ವಾಮಿ, ಚಂದ್ರು, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‌ಕುಮಾರ್‌, ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next