Advertisement
ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ಸಾಕಷ್ಟು ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚಿಸಲು ಕೇಂದ್ರದ ಮಾಜಿ ಸಚಿವರೂ ಆಗಿರುವ ಗುಲಾಂ ನಬಿ ಆಜಾದ್ ಅವರು ಸೋಮವಾರ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Related Articles
Advertisement
ಅಲ್ಲದೆ, ಅವರ ಆಪ್ತರಾಗಿರುವ ದಿನೇಶ್ ಗುಂಡೂರಾವ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಎಲ್ಲವೂ ಸಿದ್ದರಾಮಯ್ಯ ಅವರ ಸೂಚನೆಯಂತೆಯೇ ನಡೆಯುತ್ತಿದೆ. ಅದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನೂ ಬದಲಾಯಿಸಬೇಕು ಎಂದು ಕೆಲವು ನಾಯಕರು ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಿದ್ದು ಆಪ್ತರಿಗೆ ಪ್ರತಿಪಕ್ಷ ಸ್ಥಾನ?: ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮುಂದುವರಿಸಿ, ಪ್ರತಿಪಕ್ಷ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಬೇಕೆಂಬ ಒತ್ತಡ ಜೋರಾದರೆ, ಸಿದ್ದರಾಮಯ್ಯನವರು ತಮ್ಮ ಆಪ್ತರಾಗಿರುವ ಮಾಜಿ ಸಚಿವ ಕೃಷ್ಣ ಬೈರೇಗೌಡ ಅಥವಾ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರ ಹೆಸರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಲು ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಹಾಗೂ ಆರ್.ವಿ.ದೇಶಪಾಂಡೆ ಅವರು ಉತ್ತರ ಕರ್ನಾಟಕ ಭಾಗಕ್ಕೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿಕೆಶಿ ಲಾಬಿ?: ರಾಜ್ಯದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿ ಇರುವುದನ್ನು ಅರಿತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ತಮ್ಮ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿ, ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯ ಮಂತ್ರಿಯಾಗಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿ ದ್ದಾರೆ ಎನ್ನಲಾಗುತ್ತಿದೆ. ಪ್ರತಿಪಕ್ಷ ನಾಯಕನ ಸ್ಥಾನ ತಮ್ಮ ಕೈ ತಪ್ಪಿದರೆ, ಒಂದು ವೇಳೆ ಒಕ್ಕಲಿಗ ನಾಯಕರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಪಕ್ಷ ಒಲವು ತೋರಿದರೆ, ಡಿ.ಕೆ.ಶಿವಕುಮಾರ್ ಬದಲಿಗೆ ಕೃಷ್ಣ ಬೈರೇಗೌಡ ಹೆಸರನ್ನು ಹೈಕಮಾಂಡ್ ಮುಂದಿಡಲು ಸಿದ್ದರಾಮಯ್ಯ ಆಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆಯೇ, ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾ ಯದ ಪ್ರಭಾವಿ ನಾಯಕರಾಗಿರುವ ಎಂ.ಬಿ.ಪಾಟೀಲ್ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಹೈ ಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ.