ಬೆಂಗಳೂರು: ರಾಜ್ಯ ವಿಧಾನ ಮಂಡಲದ ಎರಡೂ ಸದನದಲ್ಲಿ ಅಂಗೀಕಾರವಾಗಿರುವ ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಮನವಿ ಮಾಡಿದ್ದಾರೆ.
ಎರಡು ದಿನಗಳ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಎಸ್ಸಿ ಎಸ್ಟಿ ನೌಕರರಿಗೆ ಬಡ್ತಿ ಮೀಸಲಾತಿ ವಿಷಯ ಪ್ರಸ್ತಾಪಿಸಿದ ಮುಖ್ಯಮಂತ್ರಿ ವಿಧೇಯಕದ ಉದ್ದೇಶವನ್ನು ವಿವರಿಸಿ ಅಂಕಿತ ಹಾಕುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ರಾಷ್ಟ್ರಪತಿಯವರು ಮಾಹಿತಿ ಪಡೆದುಕೊಂಡರು. ವಿಶೇಷವಾಗಿ ಎಸ್ಸಿಪಿ ಟಿಎಸ್ಪಿ ಕಾಯ್ದೆ ಜಾರಿಗೆ ತಂದಿರುವ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಕಾಯ್ದೆಯ ಪ್ರತಿಯೊಂದನ್ನು ಕಳುಹಿಸಿಕೊಡುವಂತೆ ಮುಖ್ಯಮಂತ್ರಿಗೆ ಸೂಚಿಸಿದರು.
ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಬೆಳಿಗ್ಗೆ ನಿಮಾನ್ಸ್ ಕನ್ವೆನÒನ್‌ನಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಅದಮ್ಯ ಚೇತನ ಸಂಸ್ಥೆಯ ಸೇವಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ಬಿಡದಿಯ ಅಮೃತಾ ಎಂಜನೀಯರಿಂಗ್ ಕಾಲೇಜು ನೂತನ ಕ್ಯಾಂಪಸ್ ಉದ್ಘಾಟನೆ ಹಾಗೂ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.