Advertisement
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಮ್ಮಿಶ್ರ ಸರ್ಕಾರ 100 ದಿನ ತಲುಪಿರುವ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸರ್ಕಾರದಿಂದ ಅವರು ಇಟ್ಟಿರುವ ನಿರೀಕ್ಷೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಆಡಳಿತಕ್ಕೆ ಚಾಲನೆ ಕೊಡುವುದು ನನ್ನ ಮೊದಲ ಗುರಿ ಎಂದರು.
Related Articles
Advertisement
ಆದಾಯ ಸಂಗ್ರಹ ಶೇ. 33ರಷ್ಟು ಬೆಳವಣಿಗೆ:ಆದಾಯ ಸಂಗ್ರಹದಲ್ಲೂ ಸರ್ಕಾರ ಹಿಂದೆ ಬಿದ್ದಿಲ್ಲ. ಮೊದಲ ಮೂರು ತಿಂಗಳ ಅವಧಿಯಲ್ಲಿ ಆದಾಯ ಸಂಗ್ರಹದಲ್ಲಿ ಶೇ. 33ರಷ್ಟು ಬೆಳವಣಿಗೆ ಕಂಡಿದೆ. ಇದು ದಾಖಲೆಯಾಗಿದ್ದು, ಇದೇ ರೀತಿಯಲ್ಲಿ ತೆರಿಗೆ ಸಂಗ್ರಹಣೆ ಮುಂದುವರಿಸಲು ಮೈತ್ರಿ ಸರ್ಕಾರದಲ್ಲಿ ಎರಡೂ ಪಕ್ಷಗಳು ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭಾರೀ ಮಳೆಯಿಂದ ಕೊಡಗು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಂಭವಿಸಿದ ಅನಾಹುತ ಮತ್ತು ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಉದ್ಭವವಾಗಿರುವ ಸಮಸ್ಯೆಗಳ ಬಗ್ಗೆ ಕಂದಾಯ ಸಚಿವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅತಿವೃಷ್ಠಿ ಮತ್ತು ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಕೆಲಸ ಮಾಡಿದ್ದಾರೆ. ಇದು ಕೂಡ ಜನರು ಸರ್ಕಾರದ ಬಗ್ಗೆ ವಿಶ್ವಾಸ ಹೊಂದಲು ಕಾರಣವಾಗಿದೆ ಎಂದು ತಿಳಿಸಿದರು. ಸಿದ್ದರಾಮಯ್ಯ ನಾಯಕತ್ವದಲ್ಲೇ ಸರ್ಕಾರಕ್ಕೆ ಸಂಪೂರ್ಣ ರಕ್ಷಣೆ: ಸಿಎಂ
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆ, ನಡವಳಿಕೆಗಳು ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ, ಸಮ್ಮಿಶ್ರ ಸರ್ಕಾರ ಭದ್ರವಾಗಿ ನಡೆಯಲು ಸಿದ್ದರಾಮಯ್ಯ ನಾಯಕತ್ವದಲ್ಲೇ ಸಂಪೂರ್ಣ ರಕ್ಷಣೆ ಇರುತ್ತದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲವೂ ಸರಿಯಾಗಿದೆ ಎಂದು ಹೇಳುವ ಪ್ರಯತ್ನ ಮಾಡಿದ್ದಾರೆ. ದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಹೇಳಿರುವ ಸಿದ್ದರಾಮಯ್ಯ ಮಾತಿನಲ್ಲಿ ತಪ್ಪೇನಿದೆ. ಅವರು ಕಾಂಗ್ರೆಸ್‌ನ ನಾಯಕರು. ತಮ್ಮ ಹೇಳಿಕೆ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಜನ ಆಶೀರ್ವಾದ ಮಾಡಿದರೆ ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಹೇಳಿದ್ದಾಗಿ ತಿಳಿಸಿದ್ದಾರೆ. ಹೀಗಾಗಿ ಅದನ್ನು ಬೇರೆ ರೀತಿಯಲ್ಲಿ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. ಸಮ್ಮಿಶ್ರ ಸರ್ಕಾರದಲ್ಲಿ ಕಂದಾಯ ಸಚಿವರಾಗಿರುವ ಆರ್.ವಿ.ದೇಶಪಾಂಡೆ ಅವರು ಕೂಡ ಹಿರಿಯ ನಾಯಕರು. ಅವರು ಮುಖ್ಯಮಂತ್ರಿಯಾಗಬೇಕು ಎಂದೂ ಕೆಲವರು ಬಯಸಿದ್ದಾರೆ. ನಾಯಕರಾದವರು ಮುಖ್ಯಮಂತ್ರಿಯಾಗಬೇಕು ಎಂದು ಬಯಸುವುದು ಅಥವಾ ಅವರ ಬೆಂಬಲಿಗರು ಒತ್ತಾಯಿಸುವುದು ತಪ್ಪಲ್ಲ. ಆದರೆ, ಈ ಸಮ್ಮಿಶ್ರ ಸರ್ಕಾರ ಭದ್ರವಾಗಿ ನಡೆಯಲು ಸಿದ್ದರಾಮಯ್ಯ ನಾಯಕತ್ವದಲ್ಲೇ ಸಂಪೂರ್ಣ ರಕ್ಷಣೆ ಇರುತ್ತದೆ ಎಂದರು. ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ ಈ ಸರ್ಕಾರ ಐದು ವರ್ಷ ನಡೆಯುತ್ತದೆ. ನಮ್ಮಲ್ಲಿ ಯಾವುದೇ ಅಪಸ್ವರ, ಬಿನ್ನಾಭಿಪ್ರಾಯ ಇಲ್ಲ. ಸರ್ಕಾರಕ್ಕೆ ಅಪಾಯವಿದೆ, ಸರ್ಕಾರ ಬಿಕ್ಕಟ್ಟಿನಲ್ಲಿದೆ ಎಂಬುದು ಊಹಾಪೋಹ ಮತ್ತು ಪ್ರತಿಪಕ್ಷ ಬಿಜೆಪಿಯ ಆರೋಪವಷ್ಟೆ ಎಂದು ಅವರು ತಿಳಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರ ಅವರು, ಇದೊಂದು ಸಣ್ಣ ವಿಚಾರ. ಸಮನ್ವಯ ಸಮಿತಿಯಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಕೈಬಿಡಬೇಕು ಎಂಬುದನ್ನು ಎರಡೂ ಪಕ್ಷಗಳ ನಾಯಕರು ಕುಳಿತು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.