ಬೆಂಗಳೂರು: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ.ಬೈರಮಂಗಲ ರಾಮೇಗೌಡ ಸರ್ಕಾವನ್ನು ಆಗ್ರಹಿಸಿದರು.
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರಿಸರವಾದಿ ಶಿವಮಲ್ಲು ಅವರ “ಮುಕ್ತ’ ಪರಿಸರ ಗೀತೆಗಳ ಕೃತಿ ಅನಾವರಣ, ಸಾಧಕರಿಗೆ “ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಆ ಹಿನ್ನೆಲೆಯಲ್ಲಿ ಹಸಿರು ಸಂರಕ್ಷಣೆಗೆ ದೊಡ್ಡ ಗಂಡಾಂತರ ಎದುರಾಗಿದೆ ಎಂದು ಹೇಳಿದರು.
ಬೆಳೆದು ನಿಂತಿರುವ ಮರಗಳನ್ನು ಅಭಿವೃದ್ಧಿ ನೆಪದಲ್ಲಿ ಹನನ ಮಾಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಬೇಕು. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಹೇಳಿದರು.
ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವಾಧ್ಯಕ್ಷ ಎಂ.ತಿಮ್ಮಯ್ಯ ಮಾತನಾಡಿ, ಅಸಂಖ್ಯಾತ ಮರ ಗಿಡಗಳನ್ನು ಬೆಳೆಸಿದ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಸ್ಥಾಪಿಸಬೇಕು. ಪರಿಸರದ ಉಳಿವಿಗಾಗಿ ಶ್ರಮಿಸಿದವರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ನೀಡ ಗೌರವಿಸಬೇಕು ಎಂದರು.
ಯೋಗ ಗುರು ಡಾ.ಎಸ್.ಎನ್.ಓಂಕಾರ್ ಅವರು “ಪರಿಸರ ನಷ್ಟದಿಂದ ಮನುಷ್ಯರ ಮೇಲಾಗುವ ದುಷ್ಪರಿಣಾಮಗಳು’ ಕುರಿತು ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳ 35ಕ್ಕೂ ಹೆಚ್ಚು ಸಾಧಕರಿಗೆ “ಕನ್ನಡ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ, ಚಲನಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್ ಉಪಸ್ಥಿತರಿದ್ದರು.