ಬೆಂಗಳೂರು: ಗುರುವಾರ ಮಂಗಳೂರಿನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕುಮ್ಮಕ್ಕು ನೀಡಿತ್ತು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಆ ನಂತರ ಮಾತನಾಡಿದ ಅವರು ಶನಿವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿಯೊಂದಿಗೆ ಮಂಗಳೂರಿಗೆ ತೆರಳಿ ಗೋಲಿಬಾರ್ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುವುದು.
ಘಟನೆಯಲ್ಲಿ ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ, ಶನಿವಾರ ಮಂಗಳೂರಿಗೆ ತೆರಳಿ ಕಾನೂನು ಸುವ್ಯವಸ್ಥೆ ಕುರಿತು ಸಭೆ ನಡೆಸಲಾಗುವುದು. ಗುರುವಾರ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕೆಲವು ಪತ್ರಕರ್ತರನ್ನು ವಿಚಾರಣೆ ನಡೆಸಲಾ ಯಿತು. ಕೆಲವರ ಬಳಿ ಐಡಿ ಕಾರ್ಡ್ ಇರಲಿಲ್ಲ. ಹಾಗಾಗಿ ಅವರನ್ನು ವಿಚಾರಣೆ ನಡೆಸಲಾಗಿತ್ತು.
ಬಳಿಕ ಐಡಿ ಕಾರ್ಡ್ ಇಲ್ಲದವರನ್ನು ಕೇರಳದ ಗಡಿವರೆಗೂ ತೆರಳಿ ಪೊಲೀಸರು ಬಿಟ್ಟು ಬಂದಿದ್ದಾರೆ ಎಂದು ಹೇಳಿದರು. ಸರ್ಕಾರ ಸೂಚಿಸದೇ ಪೊಲೀಸರು ಗೋಲಿಬಾರ್ ಮಾಡಿದ್ದರಾ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿರುವುದಕ್ಕೆ ತಿರುಗೇಟು ನೀಡಿದ ಅವರು, ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದವರು. ಅನುಭವಿಗಳು. ಗೋಲಿಬಾರ್ ಯಾಕೆ ಆಯಿತು ಎನ್ನುವುದನ್ನು ಮಂಗಳೂರಿಗೆ ತೆರಳಿದಾಗ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಅಮಿತ್ ಶಾ ಸೂಚನೆಯಂತೆ ಕ್ರಮ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಗತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡಲಾಗಿದ್ದು, ಅವರು ನೀಡಿರುವ ಸಲಹೆ, ಸೂಚನೆಯಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಿಂತಿರುಗಿದ ಬಸವರಾಜ ಬೊಮ್ಮಾಯಿ, ಶುಕ್ರವಾರ ಸಿಎಂ ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ.
ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಜನರನ್ನು ಮತ್ತೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಮಂಗಳೂರು, ಕಲಬುರಗಿಯಲ್ಲಿ ಪ್ರತಿಭಟನಾಕಾರರ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗಿತ್ತು. ನಾವು ಯಾವುದೇ ಪ್ರಚೋದನೆ ನೀಡಿಲ್ಲ. ಕಾಂಗ್ರೆಸ್ ನಾಯಕರ ಪ್ರಚೋದನೆಯಿಂದಲೇ ಗಲಾಟೆ ನಡೆದಿದೆ. ಇದರ ಹೊಣೆಯನ್ನು ಕಾಂಗ್ರೆಸ್ ಹೊರಬೇಕು. ಮಂಗಳೂರಿನಲ್ಲಿ ಪೊಲೀಸರು ಪ್ರಚೋದನೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರ ಎಂದರು.