ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ತುಂಬಿದ್ದು, ಸರ್ಕಾರದ ಭಾಗವಾಗಿರುವ ಕಾಂಗ್ರೆಸ್‌ನಲ್ಲಿ ಯಾವುದೇ ಸಂಭ್ರಮದ ವಾತಾವರಣ ಕಂಡು ಬರುತ್ತಿಲ್ಲ. ಉಪ ಮುಖ್ಯಮಂತ್ರಿ ಪರಮೇಶ್ವರ್ ಸಮಾಧಾನಕ್ಕೆ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎನ್ನುವುದನ್ನು ಬಿಂಬಿಸುವ ಪ್ರಯತ್ನ ನಡೆಸಿದರು.
ಆದರೆ, ಪಕ್ಷದಲ್ಲಿ ಆಂತರಿಕವಾಗಿ ಶಾಸಕರು ಹಾಗೂ ಪಕ್ಷದ ಮುಖಂಡರಿಗೆ ಸರ್ಕಾರದಲ್ಲಿ ಮಾನ್ಯತೆ ದೊರೆಯುತ್ತಿಲ್ಲ ಎಂಬ ಅಸಮಾಧಾನ ಮನೆ ಮಾಡಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒಂದು ರೀತಿಯಲ್ಲಿ ಮೌನ ತಾಳಿರುವುದು ಮತ್ತು ಅವಕಾಶ ಸಿಕ್ಕಾಗಲೆಲ್ಲಾ ಪರೋಕ್ಷವಾಗಿ ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮ ಆಪ್ತರ ಬಳಿ ಅಸಮಧಾನ ತೋಡಿಕೊಳ್ಳುತ್ತಿರುವುದು ದೋಸ್ತಿಗಳಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ.
ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದ ಕೆಲಸಗಳಿಗೆ ಸಚಿವರು ಹಾಗೂ ಮುಖ್ಯಮಂತ್ರಿ ಬಳಿ ಹೋದರೆ ಯಾವುದೇ ಬೆಲೆ ಸಿಗುತ್ತಿಲ್ಲ ಎಂದು ಅನೇಕ ಶಾಸಕರು ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡಿದ್ದರು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿಯೂ ಸೋತ ಜೆಡಿಎಸ್ ಅಭ್ಯರ್ಥಿಗಳು ಹೇಳಿದವರನ್ನು ವರ್ಗಾವಣೆ ಮಾಡಲಾಗುತ್ತಿದೆ ಕೆಲ ಕಾಂಗ್ರೆಸ್ ಶಾಸಕರು ಎಂದು ಆರೋಪಿಸಿದ್ದರು.
ಅಲ್ಲದೇ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಘೋಷಣೆ ಮಾಡಿದ್ದ ಅನೇಕ ಯೋಜನೆಗಳಿಗೆ ಕತ್ತರಿ ಹಾಕುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಏಕ ಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಕಳೆದ ಐದು ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಿಂದ ಹಿಡಿದು, ತಳ ಮಟ್ಟದ ಕಾರ್ಯಕರ್ತರು ಸಮ್ಮಿಶ್ರ ಸರ್ಕಾರದ ಬಗ್ಗೆ ದೂರುಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೂ ತಂದಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿ ಆ.31ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆ ಮಹತ್ವ ಪಡೆದಿದೆ.