ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪಕ್ಷದಲ್ಲಿರುವ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಕರೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಿ ಎಲ್ಲ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅತಿ ಹೆಚ್ಚು ಮತಗಳನ್ನು ಗೆಲ್ಲಿಸಬೇಕು. ಪಕ್ಷದಲ್ಲಿ ಯಾವ ಹುದ್ದೆ ನೀಡಿದರೂ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಎಸ್. ಮಂಜುನಾಥ್ ಮಾತನಾಡಿ, ಚುನಾವಣೆ ಹತ್ತಿರವಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾಲ ಬದಲಾಗಿದ್ದು, ಕಾಲಕ್ಕೆ ತಕ್ಕಂತೆ ನಾವು ಬದಲಾಗಿ ಸಂಘಟನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ವಿದಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೇರ್ಲಗುಂಟೆ ಎಂ. ರಾಮಪ್ಪ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಿಲ್ಲ. ನನಗೆ ಮೂರು ತಿಂಗಳು ಮುಂಚಿತವಾಗಿ ಅಭ್ಯರ್ಥಿಯಾಗಿ ಪಕ್ಷ ಟಿಕೆಟ್ ಘೋಷಿಸಲಾಗಿದೆ. ಇದರಿಂದ ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಐದು ಜಿಲ್ಲೆಯ ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಲು ಅವಕಾಶ ದೊರೆತಿದೆ. ಹಾಗಾಗಿ ಪ್ರತಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ನನಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂ.ಎ. ಸೇತುರಾಂ, ಕೆಪಿಸಿಸಿ ಸದಸ್ಯ ಜೆ.ಜೆ. ಹಟ್ಟಿ ತಿಪ್ಪೇಸ್ವಾಮಿ, ಎಸ್.ಎಂ.ಎಲ್. ಫಯಾಜ್, ಪ್ರಚಾರ ಸಮಿತಿ ಕಾರ್ಯದರ್ಶಿ ಮಾಧುರಿ ಗಿರೀಶ್, ಸಂಚಾಲಕ ಹಾಲಸ್ವಾಮಿ, ಮಾಧ್ಯಮ ಕಾರ್ಯದರ್ಶಿ ಎನ್.ಡಿ. ಕುಮಾರ್ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.