ಬೆಂಗಳೂರು: ಬಿಜೆಪಿಯಲ್ಲಿ ಕೆಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಕೊನೆಗೂ ವೇದಿಕೆ ಸಿದ್ಧವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಭೇಟಿ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶನಿವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಮಿತ್ ಶಾ ಅವರು ಆ.12ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಳಿಕ ಸಮಾವೇಶದ ದಿನಾಂಕ ನಿಗದಿಪಡಿಸಲಾಗುತ್ತದೆ.
ಇದಲ್ಲದೆ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲೂ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಮೋರ್ಚಾದ ಉಸ್ತುವಾರಿ ಹೊಂದಿರುವ ಕೆ.ಎಸ್.ಈಶ್ವರಪ್ಪ ಮತ್ತು ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರಿಗೆ ವಹಿಸಲಾಗಿದೆ.
ಹಿಂದುಳಿದ ಜಾತಿಗಳ ಪಟ್ಟಿ: ಹಿಂದುಳಿದ ವರ್ಗದಲ್ಲಿ ಅನೇಕ ಜಾತಿಗಳಿದ್ದು, ಈ ಎಲ್ಲಾ ಜಾತಿಗಳ ಪಟ್ಟಿ ಸಿದಟಛಿಪಡಿಸಿ ಆಯಾ ಜಾತಿಯ ಮುಖಂಡರೊಂದಿಗೆ ಚರ್ಚಿಸಿ ಅವರನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 200 ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಕಮಿಟಿ ರಚಿಸುವ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಕ್ಷೇತ್ರಗಳಲ್ಲಿ ಇನ್ನು ಒಂದು ವಾರದಲ್ಲಿ ಬೂತ್ ಕಮಿಟಿಗಳನ್ನು ರಚಿಸುವಂತೆ ಮೋರ್ಚಾದ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲಾಗುವುದು. ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ವಿಧೇಯಕಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
– ಬಿ.ಜೆ.ಪುಟ್ಟಸ್ವಾಮಿ,
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ