ಬೀದರ: ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಮಾರೆಪ್ಪ ಅವರು ನಗರದ ಸಫಾಯಿ ಕರ್ಮಚಾರಿಗಳ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸಫಾಯಿ ಕರ್ಮಚಾರಿಗಳ ಕುಂದು ಕೊರತೆಗಳನ್ನು ಆಲಿಸಿದ ಅವರು, ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ, ಶೌಚಾಲಯ ನಿರ್ಮಾಣ ಹಾಗೂ ಅವರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯ ಸಫಾಯಿ
ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಮಾಸಿಕ 1,000 ರೂ.ವನ್ನು ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ತಾಂತ್ರಿಕ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 3,000 ರೂ. ಗಳ ವರೆಗೆ ವಿದ್ಯಾರ್ಥಿವೇತನ ನೀಡುತ್ತಿದೆ ಎಂದರು.
ನಗರ ಸಭೆಯಿಂದ ಉಚಿತವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ಸಫಾಯಿ ಕರ್ಮಚಾರಿಗಳು ಈ ಸೌಲಭ್ಯದ ಸದುಪಯೋಗ ಪಡೆಯಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಹುದ್ದೆ ಒದಗಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಫಾಯಿ ಕರ್ಮಚಾರಿಗಳು ವಾಸಿಸುವ ಕಾಲೋನಿಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಎಲ್ಲರ ಮನೆಗಳಲ್ಲಿಯೂ ಶೌಚಾಲಯಗಳು ಇರುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಇರುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ತಲುಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ನಗರಸಭೆ ಪೌರಾಯುಕ್ತರು ಹಾಗೂ ಇತರೆ ಅಧಿಕಾರಿಗಳಿಗೆ ಸೂಚಿಸಿದರು.
ನಿಗಮದ ಕಲಬುರಗಿ ವಲಯ ನಿರ್ದೇಶಕ ವೆಂಕಟರಾವ್ ಸಿಂಧೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರೇಮಸಾಗರ ದಾಂಡೇಕರ್, ಪೌರಾಯುಕ್ತ ಮನೋಹರ, ನಗರಸಭೆಯ ಸದಸ್ಯರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.