ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ, ಶಿವನ ಸಮುದ್ರದ ರಂಗನಾಥಸ್ವಾಮಿ, ಚಾಮರಾಜ ನಗರದ ಚಾಮರಾಜೇಶ್ವರಸ್ವಾಮಿ ಮತ್ತು ಹಿಮವದ್ ಗೋಪಾಲಸ್ವಾಮಿ ದೇವಾಲಯದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್ತು ರಚನೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ ಬ್ರಹ್ಮರಥ ನಿರ್ಮಾಣ, ಬಿಳಿಗಿರಿ ಭವನ ವಸತಿ ಗೃಹ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ರಂಗನಾಥಸ್ವಾಮಿ ಮತ್ತು ಸಮೂಹ ದೇವಾಲಯಗಳ ಅಭಿವೃದ್ಧಿ ಹಾಗೂ ವಸತಿ ಗೃಹಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಚಾಮರಾಜೇಶ್ವರ ದೇವಾಲಯದ ಬ್ರಹ್ಮರಥ ಹಾಗೂ ರಥ ನಿಲುಗಡೆ ಕೊಠಡಿಯ ಕಾಮಗಾರಿಯನ್ನು ವೇಗಗೊಳಿಸಬೇಕು. ವಿಳಂಬಕ್ಕೆ ಅವಕಾಶವಾಗಬಾರದು. ಏಪ್ರಿಲ್ ಅಂತ್ಯದೊಳಗೆ ಈ ಎಲ್ಲಾ ಕೆಲಸ ಮುಗಿಸುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರದ ಹಿಮವದ್ ಗೋಪಾಲಸ್ವಾಮಿ ದೇವಾಲಯದಲ್ಲಿ ಭಕ್ತಾದಿಗಳಿಗೆ ಮೂಲ ಸೌಕರ್ಯ, ದೇವಾಲಯದ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಕೊಳ್ಳೇಗಾಲ ಪಟ್ಟಣದಲ್ಲಿ ಮರಳೇಶ್ವರ ಸ್ವಾಮಿ ದೇವಾಲಯದಲ್ಲಿರುವ ಅಂಗಡಿ ಮಳಿಗೆಗಳ ಬಾಕಿ ಇರುವ ಬಾಡಿಗೆ ಬಾಬ¤ನ್ನು ಪಡೆದು ದೇವಾಲಯದ ಖಾತಗೆ ಜಮಾ ಮಾಡಬೇಕು. ಈ ಅಂಗಡಿ ಮಳಿಗೆಗಳಿಗೆ ಹೊಸದಾಗಿ ಬಾಡಿಗೆ ನಿಗದಿಪಡಿಸಲು ಶೀಘ್ರವಾಗಿ ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಲೋಕೋಪಯೋಗಿ ಎಂಜಿನಿಯರ್ ಸುರೇಂದ್ರ, ತಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ನಂಜುಂಡಯ್ಯ, ಸುದರ್ಶನ್, ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ್ ಇದ್ದರು.