ಬೆಂಗಳೂರು: ದೇಶವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದರ ಜತೆಯಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು ಆತಂಕದ ವಿಷಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಪ್ರತಿಷ್ಠಾನದಿಂದ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ. ನಮ್ಮಲ್ಲಿರುವ ಆರ್ಥಿಕ ಮತ್ತು ಮಾನವ ಸಂಪನ್ಮೂಲ ಸಮಾಜದ ಅಭಿವೃದ್ಧಿಗೆ ಬಳಕೆಯಾದಾಗ ಮಾತ್ರ ಅದಕ್ಕೆ ಬೆಲೆ, ನೆಲೆ ದೊರೆಯುತ್ತದೆ. ಇಂತಹ ಕ್ರಮದಿಂದ ದೇಶ ಪ್ರಗತಿ ಕಾಣಲು ಸಾಧ್ಯ ಎಂದು ಹೇಳಿದರು.
ಜೀವನದಲ್ಲಿ ಕಠಿಣ ಪರಿಶ್ರಮದಿಂದ ಮಾತ್ರ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ. ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣದಲ್ಲಿ ಪರಿಹಾರವಿದೆ. ನಾವು ನೀಡುವ ಶಿಕ್ಷಣ ವ್ಯಕ್ತಿಯ ಭವಿಷ್ಯ ರೂಪಿಸುವ ಜತೆಗೆ, ಸಮಾಜಕ್ಕೆ ಅಗತ್ಯವಿರುವ ವ್ಯಕ್ತಿತ್ವಗಳನ್ನು ನಿರ್ಮಿಸಬೇಕು. ಸಮಾಜಕ್ಕಾಗಿ ಬದುಕುವಂತಹ ವಿನಯವಂತಿಕೆ ಮತ್ತು ಸೌಜನ್ಯವನ್ನು ವಿದ್ಯಾರ್ಥಿಗಳಿಗೆ ಕಲಿಸಿದಾಗ ಮಾತ್ರ ಶಿಕ್ಷಣ ಮತ್ತು ಬದುಕಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು.
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಮಾತನಾಡಿ, ಉತ್ತಮ ಶಿಕ್ಷಣ ಪುಸ್ತಕ ಮತ್ತು ಬೋಧನೆಯಿಂದ ಬರುವಂತಹದಲ್ಲ. ಉತ್ತಮರಾಗಬೇಕು ಎನ್ನುವ ತುಡಿತ ನಮ್ಮ ಮನಸ್ಸಿನಲ್ಲಿರಬೇಕು. ಮನಸ್ಸು ಎನ್ನುವುದು ಕುದುರೆ ಇದ್ದಂತೆ. ಅದಕ್ಕೆ ಲಗಾಮು ಹಾಕಿದರೆ ಮಾತ್ರ ನಿಯಂತ್ರಣಕ್ಕೆ ಬರುತ್ತದೆ. ಅದೇ ರೀತಿ ನಿರಂತರ ಬರವಣಿಗೆ, ಓದಿನಿಂದ ಯಶಸ್ಸು ಸಾ ಧಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಸರ್ಕಾರಿ ಹಾಗೂ ಸರ್ಕಾರದ ಮಾನ್ಯತೆ ಪಡೆದ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ವಿಶೇಷ ಚೇತನ ಹಾಗೂ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಾಗೂ 30 ಸರ್ಕಾರಿ ಹಾಗೂ ಸರ್ಕಾರಿ ಮಾನ್ಯತೆ ಪಡೆದ ಶಾಲೆಗಳಿಗೆ ಗಡಿಯಾರ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಇದೇ ವೇಳೆ ಪುರಸ್ಕರಿಸಲಾಯಿತು.
ರಕ್ಷಾ ಪ್ರತಿಷ್ಠಾನದ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ.ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.