Advertisement

ಎಲ್ಲರೂ ಒಗ್ಗೂಡಿ ದುಡಿದಾಗ ದೇಶದ ಅಭಿವೃದ್ಧಿ

01:54 PM Aug 23, 2017 | Team Udayavani |

ಚಿಕ್ಕಮಗಳೂರು: ಎಲ್ಲರೂ ಒಗ್ಗೂಡಿ ದುಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ತಿಳಿಸಿದರು.

Advertisement

ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್‌ ಸದಸ್ಯರುಗಳಿಗೆ ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ನಡೆದ ನವ ಭಾರತ ಸಂಕಲ್ಪ (ನವ ಭಾರತ ಚಳವಳಿ 2017-22) ಕುರಿತ ಸಮಾವೇಶದಲ್ಲಿ ಅವರು 
ಮಾತನಾಡಿದರು.  ಜನಪ್ರತಿನಿಧಿಗಳು ದೇಶ ಕಟ್ಟುವ ಜವಾಬ್ದಾರಿ ಹೊಂದಿರಬೇಕು. ದೇಶದಲ್ಲಿನ ಬಡತನ ನಿರ್ಮೂಲನೆಗೆ ಶ್ರಮಿಸಬೇಕು, ಜಾತಿ ವರ್ಗಗಳಿಂದ ಹೊರತಾದ ಸಮಾಜ ನಿರ್ಮಾಣವಾಗಬೇಕು. ಮೇಲು ಕೀಳು ಎಂಬ ಭಾವನೆ ಹೋದಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರಗಳು ಶ್ರೀ ಸಾಮಾನ್ಯರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಾದ ನಮ್ಮ ಮೇಲಿದೆ. ಸ್ವತ್ಛತೆ ಕುರಿತು ಗ್ರಾಮಾಂತರ ಪ್ರದೇಶಗಳಲ್ಲಿ ಜನರಿಗೆ ಜನಪ್ರತಿನಿಧಿಗಳು ಅರಿವು ಮೂಡಿಸಬೇಕು. ನೈರ್ಮಲ್ಯದಿಂದಾಗುವ ದುಷ್ಟಪರಿಣಾಮಗಳ ಕುರಿತು ಅವರಲ್ಲಿ ಅರಿವು ಮೂಡಿಸಿ ತಮ್ಮ ಗ್ರಾಮಗಳನ್ನು
ಸ್ವತ್ಛವಾಗಿಟ್ಟುಕೊಳ್ಳುವಂತೆ ತಿಳಿಸಬೇಕಲ್ಲದೆ ಶೌಚಾಲಯ ನಿರ್ಮಿಸಿಕೊಳ್ಳಲು ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್‌ ಮಾತನಾಡಿ, ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಜನರಿಕ್‌ ಔಷಧಿ ಮಳಿಗೆಗಳನ್ನು ಈಗಾಗಲೇ ಜಿಲ್ಲಾ ತಾಲೂಕು ಮಟ್ಟದಲ್ಲಿ ಪ್ರಾರಂಭಿಸಲಾಗಿದ್ದು, ಹೋಬಳಿ ಮಟ್ಟದಲ್ಲೂ ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಹಾಗೂ ಜಿ.ಪಂ.ನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಸತ್ಯವತಿ ಮಾತನಾಡಿ, ಜಿಲ್ಲೆಯನ್ನು ಅ.2 ಕ್ಕೆ ಬಯಲು ಮಲ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಸಂಕಲ್ಪ ಮಾಡಲಾಗಿದೆ. ಈ ದಿಸೆಯಲ್ಲಿ ಶೌಚಾಲಯ ನಿರ್ಮಾಣವಾಗದ ಕಡೆಗಳಲ್ಲಿ ಜಿಲ್ಲಾ ಪಂಚಾಯತ್‌ ಸದಸ್ಯರು, ತಾಲೂಕು ಪಂಚಾಯತ್‌ ಅಧ್ಯಕ್ಷರು,  ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಶೌಚಾಲಯ ನಿರ್ಮಾಣಕ್ಕೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

Advertisement

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್‌ ಎಲ್ಲರಿಗೂ ಸಂಕಲ್ಪದಿಂದ ಸಾಧನೆಗೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಗಾರದಲ್ಲಿ ಜಿ.ಪಂ ಉಪಕಾರ್ಯದರ್ಶಿ ರಾಜಗೋಪಾಲ್‌, ಜಿಲ್ಲಾ ಪಂಚಾಯತ್‌ ಸದಸ್ಯರು, ತಾಲೂಕು ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next